ಕರ್ನಾಟಕ ರಾಜ್ಯದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸಲು ಸಮಗ್ರ ಹಾಗೂ ಸಮರ್ಥ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದರ ಜೊತೆಯಲ್ಲಿ ಜನರಿಗೆ ಆರೋಗ್ಯ, ಶಿಕ್ಷಣ, ನೈರ್ಮಲ್ಯ ಹಾಗೂ ಸುಸ್ಥಿರ ಕೃಷಿ ವ್ಯವಸ್ಥೆಯುಳ್ಳ ರಾಜ್ಯವನ್ನಾಗಿ ರೂಪಿಸಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ. ನನ್ನ ಸರ್ಕಾರವು 2024-25ನೇ ಸಾಲಿನಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದರೊಂದಿಗೆ ವಿತ್ತೀಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೇಹ್ಲೋಟ್ ಬಣ್ಣಿಸಿದರು.
ರಾಜ್ಯ ಶಿಕ್ಷಣ ಇಲಾಖೆಯಲ್ಲಿ 13,000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1,088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಸಲಾಗಿದೆ. 311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಹೀಗೆ
ವಾರದ ಎಲ್ಲಾ ದಿನ ಮೊಟ್ಟೆ ವಿತರಣೆ
ವಿವೇಕ ಯೋಜನೆ ಹಾಗೂ ವಿಶೇಷ ಅನುದಾನದಡಿ 5349 ಶಾಲಾ ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿವೆ. ಪ್ರಸ್ತುತ 784 ಕೊಠಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುತ್ತಿದೆ. ರಾಜ್ಯದ 1953 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಿ ನರ್ಸರಿ ಶಾಲೆಗಳನ್ನು ತೆರೆಯಲಾಗಿದೆ. ಇದಷ್ಟೇ ಅಲ್ಲದೆ, ಮಕ್ಕಳಿಗೆ ರಜಾ ದಿನಗಳನ್ನು ಹೊರತುಪಡಿಸಿ ವಾರದ ಎಲ್ಲಾ ದಿನಗಳಂದು ಸರ್ಕಾರ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ನುಗಳು ಸೇರಿ ಮೊಟ್ಟೆಯನ್ನು ನೀಡುತ್ತಿವೆ ಎಂದರು.
ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು 37,662 ಕೋಟಿ
ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ 2002 ರಲ್ಲಿ ಡಾ. ಡಿ.ಎಂ.ನಂಜುಂಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ವರದಿಯನ್ನು ಆಧರಿಸಿ ಇದುವರೆಗೆ 37,662 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಈ ದಿಶೆಯಲ್ಲಿ ಖರ್ಚು ಮಾಡಿದ ಸಂಪನ್ಮೂಲಗಳ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನದ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಆರ್ಥಿಕ ತಜ್ಞರಾದ ಡಾ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈ ವರ್ಷವೇ ತನ್ನ ವರದಿಯನ್ನು ಸಲ್ಲಿಸಲಿದೆ. ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಲ್ಲಿ ಸಮತೋಲನವನ್ನು ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
₹10.27 ಲಕ್ಷ ಕೋಟಿ ಹೂಡಿಕೆಗೆ ಒಡಂಬಡಿಕೆ
ನನ್ನ ಸರ್ಕಾರವು ಇತ್ತೀಚೆಗೆ ತಾನೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದೆ. ವಿಶ್ವದ 19 ಪ್ರಮುಖ ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು. ಈ ಸಮ್ಮೇಳನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೂಡಿಕೆಯಲ್ಲಿ ಹೊಸ ದಾಖಲೆಯನ್ನೆ ಬರೆದಿದೆ. 10.27 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವನ್ನು ಹೂಡಿಕೆ ಮಾಡಲು ಒಡಂಬಡಿಕೆಗಳಾಗಿವೆ. ಈ ಬಾರಿ ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ವ್ಯಾಪ್ತಿಯಿಂದ ಹೊರಗೆ ಶೇ.75ಕ್ಕೂ ಹೆಚ್ಚಿನ ಪ್ರಮಾಣದ ಹೂಡಿಕೆ ಒಪ್ಪಂದಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಶೇ.45ರಷ್ಟು ಹೂಡಿಕೆ ಮಾಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲೂ ಕರ್ನಾಟಕವು ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ ಎಂದರು.
ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ
ರಾಜ್ಯವು ತನ್ನ 2024-25 ರ ಬಜೆಟ್ನ ಶೇ.15.01ರಷ್ಟು ಸಂಪತ್ತನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ. ನನ್ನ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಕಾರಣದಿಂದಲೇ ಕಂದಾಯ, ಗ್ರಾಮೀಣಾಭಿವೃದ್ಧಿ, ಅಬಕಾರಿ, ಅರಣ್ಯ ಮುಂತಾದ ಇಲಾಖೆಗಳಲ್ಲಿ ಅಧಿಕಾರಿ ನೌಕರರ ವರ್ಗಾವಣೆಗಳಿಗಾಗಿ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಜನರಿಗೆ ನೀಡುವ ಸವಲತ್ತುಗಳನ್ನು ಮಧ್ಯವರ್ತಿ ರಹಿತವಾಗಿ ನೀಡಲು ಕ್ರಮವಹಿಸಲಾಗಿದೆ. ಹಿಂದೆ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿವೆ ಎಂದರು.
2024-25ರ ಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ರಾಜ್ಯದ ರಾಜಸ್ವ ಸಂಗ್ರಹಣೆಯು 1,81,908 ಕೋಟಿ ರೂ.ಗಳಿಗೆ ತಲುಪಿರುತ್ತದೆ. ಕಳೆದ ಸಾಲಿಗೆ ಹೋಲಿಸಿದರೆ, ಡಿಸೆಂಬರ್ ತಿಂಗಳ ಅಂತ್ಯದವರೆಗೆ ರಾಜ್ಯದ ರಾಜಸ್ವ ಸ್ವೀಕೃತಿಯು ಶೇಕಡ 13 ರಷ್ಟು ಬೆಳವಣಿಗೆ ಸಾಧಿಸಿದೆ. ರಾಜ್ಯಗಳಿಂದ ಸ್ವೀಕೃತವಾಗುವ ಒಟ್ಟುಜಿ.ಎಸ್.ಟಿ ತೆರಿಗೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯದವರೆಗೆರಾಜ್ಯದ ಜಿ.ಎಸ್.ಟಿ ತೆರಿಗೆಯು ಶೇ.12ರಷ್ಟು ವರ್ಷವಾರು ಬೆಳವಣಿಗೆ ಸಾಧಿಸಿದೆ ಎಂದರು.
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಕ್ರಮ
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಮಾಜದ ಆರ್ಥಿಕ ದುರ್ಬಲವರ್ಗದ ಜನತೆಯಿಂದ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆಮತ್ತು ಒತ್ತಡದ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ.ಕರ್ನಾಟಕ ರಾಜ್ಯದಲ್ಲಿ ಕಿರು ಸಾಲ ಮತ್ತು ಸಣ್ಣ ಸಾಲವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡ ತಡೆಯುವನಿಟ್ಟಿನಲ್ಲಿ ಪರಿಣಾಮಕಾರಿಯಾದ ಗಂಭೀರ ಕ್ರಮಗಳನ್ನು ಕೈಗೊಳ್ಳಲು, ಕಿರುಕುಳ ನೀಡುವ ವ್ಯಕ್ತಿಗಳಿಗೆ ಕನಿಷ್ಠ 6 ತಿಂಗಳುಮತ್ತು ಗರಿಷ್ಠ 10 ವರ್ಷಗಳ ವರೆಗೆ ವಿಸ್ತರಿಸಬಹುದಾದ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಯನ್ನು ನನ್ನ ಸರ್ಕಾರ ಅನುಷ್ಠಾನಗೊಳಿಸಿದೆ. ಕಿರು ಸಾಲ ವಸೂಲಾತಿಯ ಕಿರುಕುಳವನ್ನು ತಡೆಯುವ ನಿಟ್ಟಿನಲ್ಲಿ ಶಾಸನಾತ್ಮಕವಾದ ಕ್ರಮಗಳಿಗೆ ಸರ್ಕಾರ ಮುಂದಾಗಿದೆ. ಕೃಷಿಯು ಹವಾಮಾನ ವೈಪರೀತ್ಯ ಮುಂತಾದ ಬದಲಾದ ಸಂದರ್ಭಗಳಲ್ಲಿ ಹಲವು ಮಾರ್ಪಾಟುಗಳನ್ನು ಹೊಂದುತ್ತಿದೆ. ಬಿತ್ತನೆಯಿಂದ ಹಿಡಿದು ಕಟಾವಿನವರೆಗೆ ಯಾಂತ್ರೀಕೃತ ಗೊಳಿಸಬೇಕಾದ ಅವಶ್ಯಕತೆ ಸೃಷ್ಟಿಯಾಗಿದೆ. ಈ ಸಾಲಿನಲ್ಲಿ 194 ಹೈಟೆಕ್ ಹಾರ್ವೆಸ್ಟ್ ಹಬ್ಗಳು ಸ್ಥಾಪನೆಯಾಗುತ್ತಿವೆ. ಹಾರ್ವೆಸ್ಟರ್ಗಳನ್ನು ಪಡೆಯುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರೈತರಿಗೆ ಶೇ.50 ರಷ್ಟು ಮತ್ತು ಇತರೆಯವರಿಗೆ ಶೇ.40 ರಷ್ಟು ಸಹಾಯ ಧನ ನೀಡಲಾಗುತ್ತಿದೆ ಎಂದರು.




