Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೈಷುಗರ್‌ ಪುನರಾರಂಭಕ್ಕೆ 50 ಕೋಟಿ ಮಂಜೂರಿಗೆ ಸಿಎಂ ಅನುಮೋದನೆ : ಸಿಎಂಗೆ ಶಾಸಕರ ಅಭಿನಂದನೆ


  • ಮೈಸೂರು ಸಕ್ಕರೆ ಕಾರ್ಖಾನೆ ಪ್ರಾರಂಭ ಹಾಗೂ ದುಡಿಯುವ ಬಂಡವಾಳಕ್ಕೆ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿಗೆ

  • ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಮಂಡ್ಯ ಶಾಸಕರ ಅಭಿನಂದನೆ

ಮಂಡ್ಯ ಜಿಲ್ಲೆಯ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಹಂಗಾಮಿನ ಕಬ್ಬು ನುರಿಸುವಿಕೆಯನ್ನು ಪ್ರಾರಂಭಿಸಲು ಹಾಗೂ ದುಡಿಯುವ ಬಂಡವಾಳಕ್ಕೆ ಸರ್ಕಾರದಿಂದ 50 ಕೋಟಿ ರೂ. ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರಕಿದೆ.

nudikarnataka.com

ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಂಡ್ಯ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

2023-24 ನೇ ಸಾಲಿನಲ್ಲಿ ಕಬ್ಬು ನುರಿಸಲು ಸರ್ಕಾರದಿಂದ ತುರ್ತಾಗಿ ಧನ ಸಹಾಯ ನೀಡಬೇಕೆಂದು ತಾವು ಹಾಗೂ ಶಾಸಕ ರವಿಕುಮಾರ್ ಗಣಗ ಅವರು ಮಾಡಿದ್ದ ಮನವಿಗೆ ಸ್ಪಂದಿಸಿ, ಸಿಎಂ ತಕ್ಷಣವೇ ಹಣ ಬಿಡುಗಡೆಗೆ ವ್ಯವಸ್ಥೆ ಮಾಡಿದ್ದಾರೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಬ್ಬು ಕಟಾವು ಪ್ರಾರಂಭವಾಗುವ ಮೊದಲು ಗ್ಯಾಂಗ್‌ಗಳಿಗೆ ನೀಡಲು ಹಣದ ಅವಶ್ಯಕತೆ ಇದೆ. ಯಂತ್ರಗಳ ದುರಸ್ತಿಗಳೂ ಇವೆ. ಅದಕ್ಕಾಗಿ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಹೀಗಾಗಿ ಕಾರ್ಖಾನೆ ಪ್ರಾರಂಭೋತ್ಸವ ಹಾಗೂ ಗ್ಯಾಂಗ್‌ಗಳಿಗೆ ನೀಡಲು 15 ಕೋಟಿ ರೂ. ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್ ) ಗಾಗಿ 35 ಕೋಟಿ ರೂ. ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಸರ್ಕಾರದ ಈ ಸಹಾಯದಿಂದ ಅವಧಿಗೆ ಸರಿಯಾಗಿ ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭಿಸಲು ಅನುಕೂಲವಾಗಲಿದೆ. ರೈತರಿಗೆ ಸಕಾಲದಲ್ಲಿ ಕಬ್ಬು ಕಟಾವು ಹಾಗೂ ಹಣ ಬಿಡುಗಡೆಗೂ ಸಹಕಾರಿಯಾಗಲಿದೆ ಎಂದು ಶಾಸಕ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

ಮನವಿಯಲ್ಲೇನಿತ್ತು?
ಮಂಡ್ಯ ಜಿಲ್ಲೆಯ ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್ ) ಯು ರೋಗಗ್ರಸ್ತವಾಗಿದ್ದು, ಕೆಲವು ವರ್ಷಗಳಿಂದ ಕಬ್ಬು ನುರಿಸುವಿಕೆಯನ್ನು ಸ್ಥಗಿತ ಮಾಡಿತ್ತು. ಕಳೆದ ವರ್ಷವಷ್ಟೇ ಕಬ್ಬು ನುರಿಸುವಿಕೆಯನ್ನು ಪುನಃ ಪ್ರಾರಂಭಿಸಿದೆ.‌ ಅಲ್ಲದೆ, ಕಳೆದ ವರ್ಷ ಸರ್ಕಾರವು ಬಜೆಟ್‌ನಲ್ಲಿ ಕಾರ್ಖಾನೆಯ ಪುನಶ್ಚೇತನಕ್ಕೆ ₹ 50 ಕೋಟಿ ರೂಪಾಯಿ ಹಣ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ₹32 ಕೋಟಿ ರೂಪಾಯಿಯನ್ನು ಮಾತ್ರವೇ ಬಿಡುಗಡೆಯಾಗಿದೆ. ಇದರಿಂದ ರೈತರಿಗೆ ತೀವ್ರ ಅನಾನುಕೂಲವಾಗುತ್ತಿದೆ.

nudikarnataka.com Ganiga Ravikumar

ಕಾರ್ಖಾನೆಯ ವ್ಯಾಪ್ತಿಯಲ್ಲಿ ಈ ಹಂಗಾಮಿನಲ್ಲಿ 10,002 ಹೆಕ್ಟೇರ್ ಪ್ರದೇಶದಲ್ಲಿ ರೈತರು ಕಬ್ಬು ಬೆಳೆದಿದ್ದು, ಸುಮಾರು 500100 ಮೆಟ್ರಿಕ್‌ ಟನ್‌ ಕಬ್ಬು ಪೂರೈಕೆ ಮಾಡುವ ಕುರಿತು ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. 5745 ರೈತರು ಕಾರ್ಖಾನೆಗೆ ಕಬ್ಬು ನುರಿಸಲು ನೀಡುವುದಾಗಿ ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ರೈತರ ಹಿತ ದೃಷ್ಟಿಯಿಂದ ಹಾಗೂ ಕಾರ್ಖಾನೆಯ ಭವಿಷ್ಯದ ದೃಷ್ಟಿಯಿಂದ ಸಕಾಲದಲ್ಲಿ ಕಬ್ಬು ನುರಿಸಲು ಪ್ರಾರಂಭಿಸಬೇಕಿದೆ.

ಕಬ್ಬು ನುರಿಸುವಿಕೆಯ ಸಿದ್ಧತೆಯು ಜೂನ್ ನಿಂದ ಆರಂಭವಾಗಬೇಕಿದೆ. ಆದರೆ, ಕಾರ್ಖಾನೆಯಲ್ಲಿ ತುರ್ತು ನಿರ್ವಹಣಾ ಕೆಲಸ,‌ ಕಟಾವು ಗ್ಯಾಂಗ್‌ಗಳಿಗೆ ಹಣ ಪಾವತಿ, ಸಿಬ್ಬಂದಿ ವೇತನ ಎಲ್ಲ ಸೇರಿ 18.54 ಕೋಟಿ ರೂಪಾಯಿಯ ಅಗತ್ಯವಿದೆ.

ಮಾಡಬೇಕಾದ ಕಾರ್ಯಗಳ ವಿವರ
ಹಂಗಾಮು ಪೂರ್ವ ನಿರ್ವಹಣೆ ಕೆಲಸ ಪೂರ್ಣ ಮಾಡಲು ₹ 5 ಕೋಟಿ, ಫ್ಯಾಕ್ಟರಿ ಕಾರ್ಮಿಕರಿಗೆ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ವೇತನ ಪಾವತಿಗೆ ₹ 1.50 ಕೋಟಿ, ಸ್ಥಳೀಯ ಹಾಗೂ ಹೊರಗಿನ ಕಬ್ಬು ಕಟಾವು ಗ್ಯಾಂಗ್‌ಗಳಿದ್ದು, ಮುಂಗಡ ಹಣ ಪಾವತಿಗೆ  ₹ 5.80 ಕೋಟಿ, ಕಾರ್ಖಾನೆಗೆ ಕೋಣನಹಳ್ಳಿ ನೀರಿನ ಲೈನ್ ನಿರ್ಮಾಣಕ್ಕೆ  ₹ 98 ಲಕ್ಷ, ಘಟಕದ ಒಳಗೆ ವಿವಿಧ ಸಿವಿಲ್ ಕಾಮಗಾರಿಗಳಿಗೆ ₹ 98 ಲಕ್ಷ, ಇಆರ್ ಪಿ ಪ್ರಾಜೆಕ್ಟ್ ಗೆ ₹ 98 ಲಕ್ಷ, ನೀರು ಮತ್ತು ಸ್ಟೇಕ್ ಆನ್‌ಲೈನ್ ಮಾನಿಟರಿಂಗ್ ವ್ಯವಸ್ಥೆ ಅಳವಡಿಕೆಗೆ ₹ 30 ಲಕ್ಷ, ಜೂಸ್ ಸಪ್ಲೀಟರ್ ಮತ್ತು ಗೇರ್ ಬಾಕ್ಸ್ ಅಳವಡಿಕೆಗೆ- ₹ 1 ಕೋಟಿ,ಜಿಐ ಶೀಟ್ ಹಾಗೂ ಕಟಾವು ಕಾರ್ಮಿಕರ ಸಾಮಗ್ರಿಗೆ- ₹ 2 ಕೋಟಿ ಅಗತ್ಯವಾಗಿದೆ.

ಹೀಗಾಗಿ ಕೂಡಲೇ ಅಗತ್ಯವಾಗಿ ಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕಿದ್ದು, ರೈತರ ಹಿತದೃಷ್ಟಿಯಿಂದ ಕೂಡಲೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ ಗೂಳಿಗೌಡ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿ ಗಣಿಗ ಅವರು ಮನವಿ ಮಾಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!