Tuesday, November 24, 2026

ಪ್ರಾಯೋಗಿಕ ಆವೃತ್ತಿ

54 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನಾಳೆ ಲೋಕಾರ್ಪಣೆ : ಸಿಎಸ್ಪಿ

ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ಬಳಿ ಲೋಕಪಾವನಿ ನದಿಯಿಂದ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ದುದ್ದ ಹೋಬಳಿಯ 54 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನಾಳೆ (ಮಾ.3)ಲೋಕಾರ್ಪಣೆ ಗೊಳ್ಳಲಿದೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.

ಮಂಡ್ಯ ತಾಲ್ಲೂಕಿನ ಬುಗದ ಕಾಳೇನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ದುದ್ದ ಏತ ನೀರಾವರಿ ಯೋಜನೆ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಬುಗದ ಕಾಳೇನಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜಿ.ಸಿ.ಮಾಧುಸ್ವಾಮಿ ಅವರು ದುದ್ದ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸುವರು. 185 ಕೋಟಿ ರೂ. ವೆಚ್ಚದಲ್ಲಿ ಲೋಕಪಾವನಿ ನದಿಯಿಂದ 19 ಕ್ಯೂಸೆಕ್ಸ್ ನೀರನ್ನು ಹರಿಸಿ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಮೇಘಾ ಇಂಜಿನಿಯರಿಂಗ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ನವರು ಕಾಮಗಾರಿಯನ್ನು ನಿರ್ವಹಿಸುತ್ತಿದ್ದಾರೆ.

ಮೊದಲ ಹಂತದಲ್ಲಿ 20 ಕೆರೆಗಳಿಗೆ ಮತ್ತು ಎರಡನೇ ಹಂತದಲ್ಲಿ 34 ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಅಭಿವೃದ್ಧಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯಾಗಿದೆ. ಇದೇ ನೀರನ್ನು ಬಳಸಿಕೊಂಡು ಹೆಚ್ಚುವರಿಯಾಗಿ ಇನ್ನೂ 24 ಕೆರೆಗಳಿಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ನುಡಿದರು.

ದುದ್ದ ಏತ ನೀರಾವರಿ ಯೋಜನೆಗೆ ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ 150ಮೀ. ಉದ್ದಕ್ಕೆ ಏರು ಕೊಳವೆ ಮಾರ್ಗ ನಿರ್ಮಿಸಿ ಶ್ರೀನಿವಾಸ ಅಗ್ರಹಾರದ ಬಳಿ ಜಾಕ್‌ವೆಲ್, ಪಂಪ್‌ಹೌಸ್ ಕಾಮಗಾರಿ, ಪಂಪ್, ಮೋಟಾರ್ ಅಳವಡಿಸಲಾಗಿದೆ. ಮೊದಲ ಹಂತದಲ್ಲಿ 5.50 ಕ್ಯೂಸೆಕ್ಸ್ ನೀರನ್ನು ಮೇಲೆತ್ತಿ 20 ಕೆರೆಗಳಿಗೆ ಹರಿಸಿದರೆ, ಎರಡನೇ ಹಂತದಲ್ಲಿ ಪಾಂಡವಪುರ ತಾಲೂಕಿನ ಕಾಳೇನಹಳ್ಳಿ ಕೆರೆ ಬಳಿ ಪಂಪ್‌ಹೌಸ್, ಜಾಕ್‌ವೆಲ್ ನಿರ್ಮಾಣ ಕಾಮಗಾರಿ, ಪಂಪ್ ಮತ್ತು ಮೋಟಾರ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಅಲ್ಲಿಂದ 13.50 ಕ್ಯುಸೆಕ್ಸ್ ನೀರನ್ನು ಮೇಲೆತ್ತುವುದರೊಂದಿಗೆ 34 ಕೆರೆಗಳನ್ನು ತುಂಬಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.

ದುದ್ದ ಹೋಬಳಿ ಮಳೆಯಾಶ್ರಿತ ಪ್ರದೇಶವಾಗಿದ್ದು, ಸಮರ್ಪಕ ಮಳೆಯಿಲ್ಲದ ಕಾರಣ ಕೆರೆಗಳು ಭರ್ತಿಯಾಗುತ್ತಿರಲಿಲ್ಲ. ಈ ಪ್ರದೇಶದಲ್ಲಿ ಅಂತರ್ಜಲ ಮಟ್ಟವೂ ಪಾತಾಳ ಸೇರಿದೆ. ಈ ಯೋಜನೆಯಿಂದ ಕೆರೆಗಳು ಭರ್ತಿಯಾಗಲಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ. ಜನ-ಜಾನುವಾರುಗಳ ಕುಡಿಯುವ ನೀರಿಗೂ ಬಳಸಬಹುದಾಗಿದೆ ಎಂದು ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಲೋಕಪಾವನಿ ನೀರಿನಿಂದ ದುದ್ದ ಹೋಬಳಿಯ 54 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 25.8.2018 ರಲ್ಲಿ ಮಂಜೂರಾತಿ ದೊರಕಿಸಿಕೊಟ್ಟರು.

ಸಣ್ಣ ನೀರಾವರಿ ಸಚಿವನಾಗಿ ಯೋಜನೆಗೆ ಅನುಮೋದನೆ ದೊರಕಿಸಿಕೊಂಡು ಕಾಮಗಾರಿ ನಿರ್ವಹಿಸಿದ್ದಾಗಿ ಹೇಳಿದ ಸಿ.ಎಸ್.ಪುಟ್ಟರಾಜು, ಮಳೆಯಾಶ್ರಿತ ಪ್ರದೇಶವಾಗಿರುವ ದುದ್ದ ಹೋಬಳಿಯ ಜನ-ಜಾನುವಾರುಗಳ ಕುಡಿಯುವ ನೀರು ಪೂರೈಸುವ ದೃಷ್ಟಿಯಿಂದ ಇದೊಂದು ಮಹತ್ವದ ಯೋಜನೆಯಾಗಿದೆ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ