Wednesday, July 24, 2024

ಪ್ರಾಯೋಗಿಕ ಆವೃತ್ತಿ

75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸುತ್ತಿದ್ದು, ರಾಜ್ಯದಲ್ಲೂ ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಪಕ್ಷದಿಂದ 75 ಕಿ.ಮೀ ಪಾದಯಾತ್ರೆ ನಡೆಸಲಾಗುವುದೆಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ನಗರದ ಕಾವೇರಿ ನರ್ಸಿಂಗ್ ಹೋಂನಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಯವರು ಸೇರಿದಂತೆ ಹಲವು ನಾಯಕರು ಹೋರಾಟ ಮಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆಯ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸುವ ಹಾಗೂ ಅವರ ಕುಟುಂಬವನ್ನು ಸಂಪರ್ಕಿಸಿ ಸನ್ಮಾನಿಸಲು ನಿರ್ಧರಿಸಿದೆ ಎಂದರು.

ಅದರಂತೆ ರಾಜ್ಯದಲ್ಲೂ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ. ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸಿ 75,000 ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.

ಮಂಡ್ಯ ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಿ ಗೌರವಿಸಲಾಗುವುದು.ನಿಧನರಾದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್ ಮೂರರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಸಮಾರಂಭ ನಡೆಯಲಿದ್ದು,ಅದು ಮುಗಿದ ನಂತರ ಪಾದಯಾತ್ರೆಯ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದರು.

ಮಳೆ ಹಾನಿಗೆ ಪರಿಹಾರ ನೀಡಲು ವಿಫಲ

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಪ್ರಧಾನಿ ಮೋದಿಯವರು ಡಬ್ಬಲ್ ಇಂಜಿನ್ ಸರ್ಕಾರ ಎಂದು ಭಾಷಣ ಮಾಡುತ್ತಾರೆ.

ಆದರೆ ಕಳೆದ ಎಂಟು ವರ್ಷಗಳಲ್ಲಿ ಅತಿವೃಷ್ಟಿ ಹಾಗು ಅನಾವೃಷ್ಟಿ ಸಂಭವಿಸಿದ ಸಂದರ್ಭದಲ್ಲಿ ಸಮರ್ಪಕ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ.

ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರ 19 ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ರಾಜ್ಯದಿಂದ ತೆರಿಗೆ ಸಂಗ್ರಹಿಸಿದೆ. ಅದರಲ್ಲಿ 45ರಿಂದ 50 ಪರ್ಸೆಂಟ್ ಎಂದರೂ 9 ಲಕ್ಷ ಕೋಟಿಯಷ್ಟು ಹಣವನ್ನು ರಾಜ್ಯಕ್ಕೆ ಕೊಡಬೇಕು. ಆದರೆ ಇದುವರೆಗೆ 1.40 ಲಕ್ಷ ಕೋಟಿಯಷ್ಟು ಮಾತ್ರ ನೀಡಿ ಅನ್ಯಾಯ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ರಾಜ್ಯದ ಪಾಲಿನ ತೆರಿಗೆ ಹಣವನ್ನು ಕೊಡದ ಮೋದಿಯವರು ಅತಿವೃಷ್ಟಿ, ಅನಾವೃಷ್ಟಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡದೆ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ.

ಮಂಗಳೂರು, ಉಡುಪಿ, ಮಡಿಕೇರಿಯಲ್ಲಿ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನ ಹರಿಸುತ್ತಿಲ್ಲ. ಈ ಬಗ್ಗೆ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದಕ್ಕೂ ಉತ್ತರ ನೀಡಿಲ್ಲ ಎಂದು ಟೀಕಿಸಿದರು.

ಪಕ್ಷದ ನಿರ್ಣಯವಲ್ಲ

ಆರ್ ಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರು ಕೈ ಜೋಡಿಸಿ ಅಧಿಕಾರ ಹಿಡಿದಿರುವುದು ಪಕ್ಷದ ನಿರ್ಣಯವಲ್ಲ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷಗಿರಿ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್ ರವರು ಜೆಡಿಎಸ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಹಾಗಾಗಿ ಅವರು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ. ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ನಡೆದಿದ್ದು ಪಕ್ಷದ ನಿರ್ಣಯದಂತೆ ನಡೆದಿಲ್ಲ ಎಂದರು.

ಉತ್ತಮ ಸೇವೆ

ಡಾ. ಕೃಷ್ಣ ಮತ್ತು ಅವರ ಕುಟುಂಬದ ಒಟ್ಟು ಆರು ಜನ ವೈದ್ಯರು ಜಿಲ್ಲೆಯ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವುದು ಶ್ಲಾಘನೀಯ.ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ ಜನರ ಆರೋಗ್ಯವನ್ನು ಪರೀಕ್ಷಿಸಿ ಅದಕ್ಕೆ ಚಿಕಿತ್ಸೆ ನೀಡುತ್ತಿರುವ ಅವರ ಸೇವೆ ಮತ್ತಷ್ಟು ಹೆಚ್ಚಾಗಲಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಬಿ. ರಾಮಕೃಷ್ಣ, ಡಾ.ಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಮಹಿಳಾ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ತಾ.ಪಂ. ಮಾಜಿ ಅಧ್ಯಕ್ಷ ತ್ಯಾಗರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ನಗರಸಭಾ ಸದಸ್ಯ ನಯೀಂ,ರುದ್ರಪ್ಪ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!