ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮಾರ್ಗವಾಗಿ ಸೆ.30ರಂದು ಆಗಮಿಸಲಿದ್ದು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ವಿಜಯಕುಮಾರ್ ಮನವಿ ಮಾಡಿದರು.
ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿಗೆ ಆಗಮಿಸಲಿದ್ದು, ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲೆಯ ಭಾರತ ಜೋಡೋ ಯಾತ್ರೆಯ ಜವಾಬ್ದಾರಿ ಹೊತ್ತಿರುವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು. ಅ.6 ಹಾಗೂ 7ರಂದು ಪಾಂಡವಪುರ ಹಾಗೂ ನಾಗಮಂಗಲ ಮೂಲಕ ಬೆಳ್ಳೂರು ಪಟ್ಟಣದಲ್ಲಿ ಯಾತ್ರೆ ಸಂಚರಿಸಲಿದ್ದು, ಕಾಂಗ್ರೆಸ್ ನಾಯಕರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದರು.
ಭಾರತ ಜೋಡೋ ಪಾದಯಾತ್ರೆಯ ಪೋಸ್ಟರ್ ಗಳನ್ನು ಜಿಲ್ಲೆಯ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಅಂಟಿಸುವ ಮೂಲಕ ಈ ಯಾತ್ರೆಯಲ್ಲಿ ಭಾಗವಹಿಸಬೇಕೆಂದರು.
ಗೋಷ್ಠಿಯಲ್ಲಿ ನಗರಸಭಾ ಸದಸ್ಯ ನಯೀಂ, ಮುಖಂಡರಾದ ಹೀನ, ಸುನೀಲ್, ಮಂಚೇಗೌಡ ಹಾಗೂ ನಿತಿನ್ ಉಪಸ್ಥಿತರಿದ್ದರು.




