ಸರ್ಕಾರ ಹಾಗೂ ಇನ್ನಿತರೆ ಕಂಪನಿಗಳು ನಡೆಸುವು ಉದ್ಯೋಗ ಮೇಳಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಕರೆ ನೀಡಿದರು.
ಶ್ರೀರಂಗಪಟ್ಟಣ ದಸರಾ ಪ್ರಯುಕ್ತ ಶ್ರೀರಂಗಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ದಸರಾ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿದ್ದಾರೆ. ಅವರಿಗೆ ಸೂಕ್ತ ಅವಕಾಶಗಳು ಸಿಗದೆ ಉದ್ಯೋಗ ವಂಚಿರಾಗಿದ್ದಾರೆ. ಅಂತವರು ಉದ್ಯೋಗಮೇಳದಂತ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಪ್ರತಿಭೆಗಳನ್ನು ಹೊರ ತರಬೇಕು. ಆಗ ಅವರಿಗೆ ಉದ್ಯೋಗ ಸಿಗುವ ಸಾಧ್ಯಗಳು ಹೆಚ್ಚಾಗಿರುತ್ತದೆ ಎಂದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸದು ಪಯೋಗವಾಗುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಮುಂದೆ ನಡೆಯುವ ಪ್ರತಿ ದಸರಾ ಮಹೋತ್ಸವದಲ್ಲೂ ಉದ್ಯೋಗ ಮೇಳ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
50 ಕ್ಕೂ ಹೆಚ್ಚು ಕಂಪನಿಗಳು
ಶ್ರೀರಂಗಪಟ್ಟಣ ದಸರಾ ಪ್ರಯುಕ್ತ ವಿದ್ಯಾರ್ಥಿಗಳು ಅನುಕೂಲಕ್ಕಾಗಿ ನಡೆಸುತ್ತಿರುವ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಿದ್ದವು. ಇವುಗಳ ಸದುಪಯೋಗಕ್ಕೆ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿ ಎಸ್.ಅಶ್ವತಿ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಕೌಶಲ್ಯಾ ಭಿವೃದ್ಧಿ ಅಧಿಕಾರಿ ಎನ್.ಆರ್.ವೇಣುಗೋಪಾಲ್, ಕಾಲೇಜಿನ ಪ್ರಾಂಶುಪಾಲ ಜಯಶಂಕರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.




