ಉತ್ತರ ಪ್ರದೇಶದ ಸಮಾಜವಾದಿ ನಾಯಕ, ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಸಂತಾಪ ವ್ಯಕ್ತಪಡಿಸಿದ್ಧಾರೆ.
ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನಾನು ಸಂತಾಪ ತಿಳಿಸುತ್ತೇನೆ ಎಂದು ಹೇಳಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಮಲಾಯಂಸಿಂಗ್ ಆಳವಾಗಿ ಬದ್ಧರಾಗಿದ್ದರು ಎಂದು ಅವರು ಕಂಬನಿ ಮಿಡಿದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ ಮಾಡಿ, ಸಮಾಜವಾದಿ ಪಕ್ಷದ ವರಿಷ್ಠರು ಮತ್ತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸ್ಮರಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ ಮುಲಾಯಂಸಿಂಗ್ ಉತ್ತರ ಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ನ್ಯಾಯದ ಹೋರಾಟ ಕಟ್ಟಿದವರಲ್ಲಿ ಮುಲಾಯಂ ಪ್ರಮುಖರು ಎಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಸಾವು ದೇಶದ ಜಾತ್ಯತೀತ ರಾಜಕೀಯ ಹೋರಾಟಕ್ಕೆ ತುಂಬಲಾರದ ನಷ್ಟ ಎಂದಿದ್ಧಾರೆ.
ರಾಮಮನೋಹರ ಲೋಹಿಯಾ ಅವರ ಅನುಯಾಯಿಯಾಗಿ ರಾಜಕೀಯ ಪ್ರವೇಶ ಮಾಡಿದ್ದ ಮುಲಾಯಂ ಸಿಂಗ್, ಜೆಪಿ ಚಳುವಳಿಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡವರು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಿದ ಮಂಡಲ್ ವರದಿಯ ಅನುಷ್ಠಾನಕ್ಕಾಗಿ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಬೆಂಬಲಕ್ಕೆ ನಿಂತಿದ್ದ ಮುಲಾಯಂ ಸಿಂಗ್, ದೇಶದಲ್ಲಿ ಸಾಮಾಜಿಕ ನ್ಯಾಯದ ಹೋರಾಟವನ್ನು ಕಟ್ಟಿದವರಲ್ಲಿ ಪ್ರಮುಖರು” ಎಂದಿದ್ದಾರೆ.
ಬಾಬರಿ ಮಸೀದಿ ಧ್ವಂಸದ ಪೂರ್ವ ಮತ್ತು ನಂತರದ ಕೋಮುವಾದಿ ರಾಜಕೀಯಕ್ಕೆ ಉತ್ತರಪ್ರದೇಶದಲ್ಲಿ ಪ್ರಬಲ ಪ್ರತಿರೋಧ ಒಡ್ಡಿದ್ದ ಮುಲಾಯಂ ಸಿಂಗ್, ಬಿಜೆಪಿ ಜೊತೆ ರಾಜಿ ಮಾಡಿಕೊಂಡವರಲ್ಲ. ರಾಜ್ಯದಲ್ಲಿ ‘ನೇತಾಜಿ’ ಎಂದೇ ಖ್ಯಾತರಾಗಿದ್ದ ಮುಲಾಯಂ ಸಿಂಗ್, ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಪರವಾದ ಆಡಳಿತ ನೀಡಿದವರು.
ದೇಶಾದ್ಯಂತ ಇಂದು ಕೋಮುವಾದಿ ಶಕ್ತಿಗಳು ವಿಜೃಂಭಿಸುತ್ತಿರುವಾಗ ಅದರ ವಿರುದ್ಧದ ಹೋರಾಟಕ್ಕೆ ಮುಲಾಯಂ ಸಿಂಗ್ ಅವರ ನಾಯಕತ್ವ ಮತ್ತು ಮಾರ್ಗದರ್ಶನ ಹಿಂದಿಗಿಂತಲೂ ಈಗ ಹೆಚ್ಚು ಅಗತ್ಯ ಇತ್ತು. ಮಾಜಿ ಮುಖ್ಯಮಂತ್ರಿ ಮತ್ತು ಮಗ ಅಖಿಲೇಶ್ ಯಾದವ್ ಅವರು ಅಪ್ಪನ ಸಾಮಾಜಿಕ ನ್ಯಾಯದ ಹೋರಾಟವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಾರೆ ಎಂಬ ಭರವಸೆ ನನಗಿದೆ. ಮುಲಾಯಂ ಸಿಂಗ್ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.




