ನೆಲ-ಜಲದ ವಿಚಾರದಲ್ಲಿ ಯಾವ ಕಾರಣಕ್ಕೂ ರಾಜಿ ಇಲ್ಲ. ನಾಡಿಗೆ ಅನ್ಯಾಯವಾದರೆ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಪಂಪಿನ ಹೊಸಹಳ್ಳಿ ಗ್ರಾಮದ ಮುಖ್ಯ ರಸ್ತೆ ಡಾಂಬರೀಕರಣ, ಸ್ಮಶಾನ ರಸ್ತೆ ಕಾಮಗಾರಿ ಹಾಗೂ ಬಸ್ ನಿಲ್ದಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರ ಸರ್ಕಾರ ವಿನಃ ಕಾರಣ ಬೆಳಗಾವಿ ನಮಗೆ ಸೇರಬೇಕು ಎಂದು ಇಡೀ ವ್ಯವಸ್ಥೆಯನ್ನು ಹಾಳುಮಾಡುವ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೂ ಮೀರಿ ವರ್ತಿಸಿದರೆ, ಪಕ್ಷಾತೀತವಾಗಿ ಯಾವುದೇ ಹೋರಾಟಕ್ಕೂ ಸಿದ್ದ ಎಂದು ಎಚ್ಚರಿಕೆ ನೀಡಿದರು.
ಹೆದ್ದಾರಿ ಕಾಮಗಾರಿಯಲ್ಲಿ ಅವ್ಯವಹಾರ
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ನನ್ನ ನಿರೀಕ್ಷೆಗೂ ಮೀರಿ ಮೂರು ಪಟ್ಟು ಅವ್ಯವಹಾರ ನಡೆದಿದೆ. ಇದರಲ್ಲಿ ಐಎಎಸ್ ಅಧಿಕಾರಿಗಳು ಹಾಗೂ ದಲ್ಲಾಳಿಗಳು ಸೇರಿದ್ದಾರೆ. ಅದನ್ನು ಹೊರ ತರುವ ಕೆಲಸ ಮಾಡುತ್ತೇನೆ.ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡುತ್ತಿದ್ದೇನೆ ಎಂದರು.
ಕಮಿಟ್ ಮೆಂಟ್ ಇಲ್ಲ
ಈ ಸರ್ಕಾರಕ್ಕೆ ಮುಖ್ಯವಾಗಿ ಕಮಿಟ್ ಮೆಂಟ್ ಇಲ್ಲ. ನಾವು ಏನು ಮಾತನಾಡಿದ್ದೇವೆ ಅದನ್ನು ಉಳಿಸಿಕೊಳ್ಳಬೇಕು ಎಂಬುದಿಲ್ಲ. ಜಿಲ್ಲಾ ಮಂತ್ರಿಗಳು ಹೊರಗಿನವರು ಇದನ್ನು ಕೇಳುತ್ತಿಲ್ಲ. ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇಲ್ಲ ಎಂದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಈ ಸಂಬಂಧ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ ಮಾಡಿದ್ದೇನೆ. ಈವರೆಗೂ ರಸ್ತೆ ದುರಸ್ತಿ ಕಾರ್ಯ ಮಾಡಿಲ್ಲ. ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಮಂತ್ರಿಗಳು ಹೊರಗಿನವರು ಅವರಿಗೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ಇನ್ನೂ ಕೆ.ಸಿ.ನಾರಾಯಣಗೌಡ ಅವರು ಕೆ.ಆರ್.ಪೇಟೆಗೆ ಸೀಮಿತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ.24 ರಂದು ಪಂಚರತ್ನ ಯಾತ್ರೆ
ಜೆಡಿಎಸ್ ಮಹತ್ವಾಕಾಂಕ್ಷೆ ಯೋಜನೆಯಾದ ಪಂಚರತ್ನ ಯಾತ್ರೆ ಡಿ.24 ರಂದು ಶ್ರೀರಂಗಪಟ್ಟಣಕ್ಕೆ ಆಗಮಿಸುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆಗೆ ಎಲ್ಲೆಡೆ ನಿರೀಕ್ಷೆ ಮೀರಿ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲರಿಗೂ ಆಸರೆಯಾಗುವ ಯೋಜನೆ ಇದಾಗಿದ್ದು, ಮತ್ತೊಮ್ಮೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.




