Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಬಲ ಬೆಲೆಯಡಿ ಭತ್ತ – ರಾಗಿ ಖರೀದಿಗೆ ಡಿ.15 ರಿಂದ ನೋಂದಣಿ ಆರಂಭ

ರೈತರಿಂದ ಕನಿ‍‍ಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಡಿ.15 ರಿಂದ ನೋಂದಣಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ ಎಂದರು.

nudikarnataka.com

ಬೆಂಬಲ ಬೆಲೆ ಯೋಜನೆಯಡಿ ಡಿ.15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಹಾಗೂ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಪ್ರತಿ ಎಕರೆಗೆ ಕನಿಷ್ಠ 10 ರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುವುದು ಎಂದು ತಿಳಿಸಿದರು.

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ.  ಭತ್ತ-ಗ್ರೇಡ್ ಎ ಗೆ 2060 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3,578 ರೂ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ/ರಾಗಿ ಖರೀದಿ ಸಂಬಂಧಿಸಿದಂತೆ ಒಟ್ಟು 32 ನೋಂದಣಿ ಕೇಂದ್ರಗಳನ್ನ ತೆರೆಯಲು ಉದ್ದೇಶಿಸಲಾಗಿದೆ ಎಂದರು.

ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‍ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಬೇಕು ಎಂದರು.

ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿಯನ್ನು ಮಾರಾಟ ಮಾಡುವ ರೈತರು ನೊಂದಣಿಗಾಗಿ ಫ್ರೂಪ್ ಐ.ಡಿ,  ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರ ಹಾಗೂ ಅಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ ಹಾಗೂ ರಾಗಿಯ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದರು

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ಕೆ.ಎಫ್.ಸಿ.ಎಸ್.ಸಿ.ಬಸವರಾಜು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎಂ.ಪಿ.ಕೃಷ್ಣ ಕುಮಾರ್,  ತಹಶೀಲ್ದಾರರಾದ ರೂಪ, ಕುಂಞ ಅಹಮದ್,  ಶ್ವೇತ ರವೀಂದ್ರ,  ನಯನ,  ನರಸಿಂಹಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!