ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಡಿ.30 ರಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಬೃಹತ್ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1 ಲಕ್ಷ ಮಂದಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿ ಯಾಗಲಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷವನ್ನು ಸದೃಢಗೊಳಿಸಲು ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಡಾ.ಅಶ್ವಥ್ ನಾರಾಯಣ್, ಆರ್.ಅಶೋಕ್, ಕೆ.ಸಿ. ನಾರಾಯಣಗೌಡ ಸೇರಿದಂತೆ ಹಲವು ಸಂಪುಟ ಸಹದ್ಯೋಗಿಗಳು ಭಾಗಿಯಾಗಲಿದ್ದು,ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಗಮನಕ್ಕೆ ತರುವೆ
ಕಬ್ಬು ಬೆಲೆ ನಿಗದಿ,ಹಾಲಿನ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಜಿಲ್ಲೆಯ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ನಾಳೆ ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಿ, ಅವರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಮಾವೇಶದ ಯಶಸ್ವಿಗೆ ನನ್ನೊಟ್ಟಿಗೆ ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಅಶೋಕ್ ಎಸ್.ಡಿ.ಜಯರಾಂ, ಡಾ.ಸಿದ್ದರಾಮಯ್ಯ, ಎನ್.ಶಿವಣ್ಣ,ಇಂಡುವಾಳು ಸಚ್ಚಿದಾನಂದ, ಕೆ.ಎಸ್.ನಂಜುಂಡೇಗೌಡ, ಡಾ.ಇಂದ್ರೇಶ್, ಎಸ್.ಪಿ.ಸ್ವಾಮಿ, ಮುನಿರಾಜು ಸೇರಿದಂತೆ ಜಿಲ್ಲೆಯ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಶ್ರಮಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಡಾ.ಸಿದ್ದರಾಮಯ್ಯ, ಕೆ.ಎಸ್. ನಂಜುಂಡೇಗೌಡ, ಇಂಡುವಾಳು ಎಸ್.ಸಚ್ಚಿದಾನಂದ, ಅಶೋಕ್ ಜಯರಾಂ ಹಾಜರಿದ್ದರು.