ಕಬ್ಬು, ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಮಂಡ್ಯದಲ್ಲಿ ಹೋರಾಟ ನಡೆಸುತ್ತಿದ್ದ ರೈತರು ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಖಂಡಿಸಿದ್ದಾರೆ.
ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಠಿ, ಅನಾವೃಷ್ಟಿಯ ನಡುವೆಯೂ ಕಷ್ಟ ಪಟ್ಟು ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಬೇಕಾದ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ. ರೈತಸಂಘದ ಹೋರಾಟಗಾರರ ಮೇಲೆ ಹಲ್ಲೆಗೆ ಮುಂದಾಗುವ ಮೂಲಕ ಸರ್ಕಾರ ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಕಿಡಿಕಾರಿದರು.
ಡಿ.30ರಂದು ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್‌ಶಾ ಬೇಟಿ ನೀಡುವ ಸಂದರ್ಭದಲ್ಲಿ ಪ್ರತಿಭಟನೆ ನಡೆಯಬಾರದು ಎಂಬ ದುರುದ್ದೇಶದಿಂದ ಸರ್ಕಾರದ ಅಣತಿಯಂತೆ ಕೆಲಸ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸುವುದಲ್ಲದೇ ಶಾಮಿಯಾನವನ್ನು ತೆರವುಗೊಳಿಸಿ ಮಹನೀಯರ ಭಾವಚಿತ್ರಕ್ಕೂ ಅಪಮಾನ ಮಾಡಿದ್ದಾರೆ ಎಂದರು.
ಸಂವಿಧಾನದಲ್ಲಿ ಪ್ರತಿಭಟಿಸುವ ಹಕ್ಕನ್ನು ಕೊಟ್ಟಿದ್ದರೂ ಕೂಡ ಸರ್ಕಾರ ಹಕ್ಕು ಕಸಿಯುವ ಪ್ರಯತ್ನ ಮಾಡಿದೆ. ಸರ್ಕಾರ ಕೂಡಲೇ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರೈತರ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದರು.




