Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಭೂತಪೂರ್ವ ಯಶಸ್ಸು ಕಂಡ ಜನ ಸಂಕಲ್ಪ ಯಾತ್ರೆ : ಸಿ.ಪಿ.ಉಮೇಶ್

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಲ್ಲಿ ಡಿ.30 ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದ್ದು,ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಧನ್ಯವಾದ ಸಲ್ಲಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜಿಲ್ಲೆಯಲ್ಲಿ ತನ್ನ ಶಕ್ತಿ ಪ್ರದರ್ಶಿಸಿದೆ. ಜಿಲ್ಲೆಯ ಏಳು ತಾಲ್ಲೂಕುಗಳಿಂದ ನಿರೀಕ್ಷೆಗೂ ಮೀರಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಆಗಮಿಸಿದ್ದರು. ಅದರಲ್ಲೂ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸ್ಪಂದಿಸಿದ್ದಾರೆ. ಇವರಿಗೆ ಪಕ್ಷ ಚಿರಋಣಿಯಾಗಿದೆ ಎಂದಿದ್ದಾರೆ.

ಜನ ಸಂಕಲ್ಪ ಯಾತ್ರೆ ಯಶಸ್ಸು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಆಡಳಿತಕ್ಕೆ ಸಿಕ್ಕ ಸ್ಪಂದನೆಯಾಗಿದ್ದು, ಡಬಲ್ ಇಂಜಿನ್ ಸರ್ಕಾರಗಳು, ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಕಾರ್ಯಕ್ರಮಗಳು ಪ್ರತಿಯೊಬ್ಬರನ್ನೂ ತಲುಪುತ್ತಿವೆ ಎನ್ನುವುದಕ್ಕೆ ಸಮಾವೇಶಕ್ಕೆ ಹರಿದುಬಂದ ಜನರೇ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸಮಾವೇಶಕ್ಕೆ ನಿಗದಿತ ಸಮಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿದಂತೆ ಹಲವು ನಾಯಕರು ಮುಂದಿನ ಚುನಾವಣೆಗೆ ಮಂಡ್ಯದಿಂದ ಸ್ವಾಭಿಮಾನದ ಕಹಳೆ ಊದಿದ್ದಾರೆ. ಇದಕ್ಕೆ ನೆರೆದಿದ್ದ ಜನಸ್ತೋಮ ಸಾಕ್ಷಿಯಾಗಿದೆ. ಈ ಮೂಲಕ ಜೆಡಿಎಸ್, ಕಾಂಗ್ರೆಸ್ ಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಎರಡು ಪಕ್ಷಗಳ ದುರಾಡಳಿತದಿಂದ ಬೇಸತ್ತಿರುವ ಜಿಲ್ಲೆಯ ಜನರು ಬಿಜೆಪಿ ಪರ ಒಲವು ತೋರಿದ್ದಾರೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರದಲ್ಲಿಯೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಅಂತೆಯೇ ಜಿಲ್ಲೆಯ ಏಳು ಕ್ಷೇತ್ರದಲ್ಲಿಯೂ ಕಮಲ ಅರಳಲಿದೆ. ಇದರೊಂದಿಗೆ ರಾಜ್ಯದಲ್ಲಿಯೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಜನಸಂಕಲ್ಪ ಯಾತ್ರೆಯನ್ನು ಯಶಸ್ಸುಗೊಳಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!