ಜ.27ರಂದು ಮಂಡ್ಯದಲ್ಲಿ ನಡೆಯಲಿರುವ ”ಪ್ರಜಾಧ್ವನಿ ಸಮಾವೇಶ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಬರೆಯಬೇಕು. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿದ್ದು, ಎಲ್ಲರೂ ಒಂದಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ” ಎಂದು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.
ಮಂಡ್ಯದ ಕರ್ನಾಟಕ ಸಂಘದಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ‘ಪ್ರಜಾಧ್ವನಿ’ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಪ್ರಜಾಧ್ವನಿ’ ಸಮಾವೇಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಬೇಕು. ಎಲ್ಲಾ ಬ್ಲಾಕ್ ಗಳಿಂದ ಕಾರ್ಯಕರ್ತರನ್ನು ಹುರಿದುಂಬಿಸಿ ಸ್ವಯಂ ಪ್ರೇರಿತರಾಗಿ ‘ಪ್ರಜಾಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜನರನ್ನು ಕರೆತರುವ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರ ಹಿಡಿಯುವ ಸಾಧ್ಯತೆಗಳು ದಟ್ಟವಾಗಿದ್ದು, ‘ಪ್ರಜಾಧ್ವನಿ’ ಸಮಾವೇಶ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಬರೆಯಬೇಕು ಎಂದರು.
ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಯಶಸ್ಸು ಸಾಧಿಸಿದೆ. ಜೆಡಿಎಸ್ ಪಕ್ಷದ ಪಂಚರತ್ನ ಮತ್ತು ಬಿಜೆಪಿಯ ಜನಸಂಕಲ್ಪ ಸಮಾವೇಶಗಳು ಮುಗಿದಿದೆ. ಜನರಿಗೆ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿದ್ದು, ಎರಡೂ ಪಕ್ಷಗಳಿಗಿಂತ ಹೆಚ್ಚು ಜನರನ್ನು ಕರೆತಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲಿದೆ ಎಂಬ ಸಂದೇಶವನ್ನು ರಾಜ್ಯಕ್ಕೆ ನೀಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಗಳಲ್ಲಿ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಇದೇ ಗೆಲುವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಚುನಾವಣಾ ಗೆಲುವಿಗೆ ಮುನ್ನುಡಿ ಬರೆಯುವ ಸಮಾವೇಶವಾಗಬೇಕು ಎಂದರು.
ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ.ಪ್ರಕಾಶ್, ಎಚ್.ಬಿ.ರಾಮು, ರಮೇಶ್ ಬಾಬು ಬಂಡಿ ಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡರಾದ ಗಣಿಗ ರವಿಕುಮಾರ್, ಸಿದ್ದಾರೂಢ ಸತೀಶ್ ಗೌಡ, ಡಾ.ಕೃಷ್ಣ, ಎಂ.ಎಸ್.ಚಿದಂಬರ್, ಕೀಲಾರ ರಾಧಾಕೃಷ್ಣ ಸೇರಿದಂತೆ ಹಲವರಿದ್ದರು.