ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (APP) ವು ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಬಿ.ಟಿ.ನಾಗಣ್ಣ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಿದ್ದು ಪಕ್ಷದ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಮಂಡ್ಯ ಜಿಲ್ಲೆಯ ಸಕ್ಕರೆ ನಾಡಿನ ಪ್ರಾಮಾಣಿಕ ಜನಸಾಮಾನ್ಯ ನಾಯಕರು ಮುಂದೆ ಬರಬೇಕೆಂದರು.
ಕರ್ನಾಟಕಕ್ಕೆ ಕ್ರೇಜಿವಾಲ್
ಇದೇ ಮಾರ್ಚ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ದಾವಣಗೆರೆಯಲ್ಲಿ ನಡೆಯಲಿರುವ ಭೂತ್ ಮಟ್ಟದ ಕಾರ್ಯಕರ್ತರಿಗೆ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ಚನ್ನಪ್ಪ ಗೌಡ ಮಾತನಾಡಿ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಭಾಗದ ಜನಸಾಮಾನ್ಯರು ಭ್ರಷ್ಟ ರಾಜಕೀಯ ಪಕ್ಷಗಳಿಗೆ ಹೆದರುವುದು ಬೇಡ. ಇಲ್ಲಿಗೆ ಮಂಡ್ಯ ಜಿಲ್ಲೆಯ ಜನರ ಶೋಷಣೆ ನಿಲ್ಲಲಿ, ಈ ಭಾಗದ ಜನಸಾಮಾನ್ಯರು ನಿಮ್ಮ ನಾಯಕನನ್ನು ನೀವೇ ಆರಿಸಿಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ಬುದ್ಧಿ ಕಲಿಸಬೇಕು ಸಮಗ್ರ ಕರ್ನಾಟಕ, ಸಮೃದ್ಧ ಮಂಡ್ಯ ಕಟ್ಟಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಮಹದೇವಸ್ವಾಮಿ, ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್, ಮಂಡ್ಯ ವಿಧಾನಸಭಾ ಕ್ಷೇತ್ರದ ಸಂಭವಿತ ಅಭ್ಯರ್ಥಿ ಬೂದನೂರು ಬೊಮ್ಮಯ್ಯ ಉಪಸ್ಥಿತರಿದ್ದರು.




