ಮಂಡ್ಯ ತಾಲೂಕಿನ ಹನಕರೆ ಮತ್ತು ಹಳೆಬೂದನೂರು ಸಮೀಪ ಅಂಡರ್ಪಾಸ್ ನಿರ್ಮಿಸುವಂತೆ ನಿನ್ನೆ ಕಾಂಗ್ರೆಸ್ ಹಾಗೂ ರೈತ ಸಂಘದ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಶಾಸಕ ಎಂ.ಶ್ರೀನಿವಾಸ್ ಆರೋಪಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ರೀತಿಯಲ್ಲಿ ಜನೋಪಯೋಗಿ ಅಂಡರ್ಪಾಸ್ ನಿರ್ಮಾಣಕ್ಕೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರಕ್ಕೆ 2021ರ ಸೆ. 6ರಂದು ಮನವಿ ಸಲ್ಲಿಸಿದ್ದೇನೆ. 2022ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೂ ಮನವಿ ಸಲ್ಲಿಸಿದ್ದು, ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಪತ್ರ ಬರೆದು ವೈಜ್ಞಾನಿಕ ಅಂಡರ್ಪಾಸ್ ನಿರ್ಮಾಣಕ್ಕೆ ಸೂಚಿಸಿದ್ದರು ಎಂದು ವಿವರಿಸಿದರು.
ಇದಲ್ಲದೆ, ಮೈಸೂರಿನ ಸಂಸದ ಪ್ರತಾಪಸಿಂಹ ಅವರಿಗೂ 2022ರ ಮೇ 22ರಂದು ಮನವಿ ಸಲ್ಲಿಸಿ ಒತ್ತಾಯ ಮಾಡಿದ್ದೆ. ನಮ್ಮ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮೇ 30ರಂದು ಮನವಿ ಸಲ್ಲಿಸಿಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರ ಮೇರೆಗೆ ಅವರೂ ಸಹ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸರಿಯಾದ ಕ್ರಮ ವಹಿಸುವಂತೆ ಸೂಚಿಸಿದ್ದರು ಎಂದು ತಿಳಿಸಿದರು.
ಕಳೆದ ಜನನರಿ 5ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿ ಪರಿಶೀಲನೆಗೆ ಆಗಮಿಸಿದ್ದ ವೇಳೆ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ ಮಾಡಿದ್ದೇನೆ, ಇಷ್ಟೇ ಅಲ್ಲದೆ ಸುತ್ತಮುತ್ತಲ ಗ್ರಾಮಸ್ಥರೊಂದಿಗೂ ಸ್ಥಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದ್ದೇವೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಹೆದ್ದಾರಿ ಪ್ರಾಧಿಕಾರ ಕಳೆದ ಫೆ. 14ರಂದೇ ಅಂಡರ್ ಪಾಸ್ ನಿರ್ಮಾಣಕ್ಕೆ ಆದೇಶ ಹೊರಡಿಸಿದೆ. ಇದನ್ನು ತಿಳಿದಿದ್ದರೂ ಸಹ ರೈತ ಸಂಘದ ಮಧುಚಂದನ್ ಜನರನ್ನು ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ರವಿಕುಮಾರ್ ಗಣಿಗ ಅವರು ಸಾಮಾಜಿಕ ಜಾಲತಾಣದಲ್ಲಿ ಸುಖಾಸುಮ್ಮನೆ ಪೋಸ್ಟ್ ಮಾಡಿ ಗೊಂದಲ ಉಂಟುಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಾಗಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶದಂತೆ ಮುಂದಿನ ದಿನಗಳಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅಂಡರ್ಪಾಸ್ ನಿರ್ಮಾಣ ಮಾಡುತ್ತದೆ. ಇನ್ನೂ ಹೆದ್ದಾರಿ ಕಾಮಗಾರಿ ಪೂರ್ಣವಾಗಿಲ್ಲ. ಸಾಂಕೇತಿಕವಾಗಿ ಉದ್ಘಾಟನೆಯಾದರೂ ಅಂಡರ್ಪಾಸ್ ಮಾಡುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಸರಿಯಲ್ಲ
ಜೆಡಿಎಸ್ ಪಕ್ಷ ಈಗಾಗಲೇ 93 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಂಡ್ಯ ಕ್ಷೇತ್ರವೂ ಒಂದಾಗಿದೆ. ಪಕ್ಷದ ವರಿಷ್ಠರು ನನ್ನ ಹೆಸರನ್ನು ಮತ್ತೆ ಘೋಷಣೆ ಮಾಡಿ ಟಿಕೆಟ್ ನೀಡುವುದಾಗಿ ತಿಳಿಸಿದೆ. ಹೀಗಿರುವಾಗ ಬೇರೆ ಬೇರೆ ಪಕ್ಷದ ಮುಖಂಡರು ಗೊಂದಲ ಮೂಡಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಸರಿಯಲ್ಲ. ಈ ಬಗ್ಗೆ ವರಿಷ್ಠರ ಗಮನ ಸೆಳೆಯಲಾಗುವುದು ಎಂದು ಸ್ಪಷ್ಟಪಡಿಸಿದರು.
ಪಕ್ಷ ಸಂಘಟನೆಗೆ ಯಾವುದೇ ಆಕ್ಷೇಪ ಇಲ್ಲ. ಆದರೆ ಟಿಕೆಟ್ ಬದಲಾವಣೆಯಾಗುತ್ತದೆ ಎಂದು ಮತದಾರರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ, ಯಾರೇ ಆಗಲಿ ಪಕ್ಷದ ಆದೇಶಕ್ಕೆ ಮನ್ನಣೆ ನೀಡಬೇಕು. ಈ ಬಗ್ಗೆ ವರಿಷ್ಠರ ಗಮನ ಸೆಳೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೋಷ್ಟಿಯಲ್ಲಿ ನಗರಸಭಾಧ್ಯಕ್ಷ ಎಚ್.ಎಸ್. ಮಂಜು, ಸದಸ್ಯೆ ಮಂಜುಳಾ ಉದಯಶಂಕರ್, ಜೆಡಿಎಸ್ ತಾಲೂಕು ಅಧ್ಯಕ್ಷ ತಿಮ್ಮೇಗೌಡ, ಜಿ.ಪಂ. ಮಾಜಿ ಸದಸ್ಯ ಯೇಗೇಶ್, ಬೂದನೂರು ಸ್ವಾಮಿ ಉಪಸ್ಥಿತರಿದ್ದರು.




