Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಂಚರತ್ನ ಯೋಜನೆಗಳ ಜಾರಿಗಾಗಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತನ್ನಿ:ಎಂ‌. ಶ್ರೀನಿವಾಸ್

ರಾಜ್ಯದ ಜನರ ಅಭಿವೃದ್ಧಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಗಳ ಜಾರಿಗೆ ಮುಂದಾಗಿದ್ದು,ಅವುಗಳ ಅನುಷ್ಠಾನಕ್ಕೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಶಾಸಕ ಎಂ.ಶ್ರೀನಿವಾಸ್ ಮನವಿ ಮಾಡಿದರು.

ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ರಾಯಶೆಟ್ಟಿಪುರ ಗ್ರಾಮದಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪಂಚರತ್ನ ಯೋಜನೆಯ ಪ್ರಣಾಳಿಕೆಯನ್ನು ಮನೆ-ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ, ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಸೇರಿದಂತೆ ರೈತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು. ಸಮಾಜದಲ್ಲಿರುವ ಬಡವರು,ಕಾರ್ಮಿಕರು ಹಾಗೂ ಮಹಿಳೆಯರ ಅಭಿವೃದ್ಧಿ ಬಗ್ಗೆ ಚಿಂತಿಸಿ ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು. ಎಲ್ಲಾ ವರ್ಗದವರ ಬಗ್ಗೆ ಚಿಂತಿಸುವ ದೂರ ದೃಷ್ಟಿಯುಳ್ಳ ಕುಮಾರಸ್ವಾಮಿ ಅವರು 2023ರ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಪಂಚರತ್ನ ಯೋಜನೆ ಜಾರಿಗೊಳಿಸಿ ಜನರ ಅಭ್ಯುದಯಕ್ಕೆ ನಾಂದಿ ಹಾಡಲಿದ್ದಾರೆ ಎಂದರು.

ಸದೃಢ ಕರ್ನಾಟಕ ನಿರ್ಮಾಣಕ್ಕಾಗಿ ಮತ್ತೊಮ್ಮೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕಿದೆ. ವಸತಿ ಇಲ್ಲದವರಿಗೆ ಸರ್ಕಾರದಿಂದಲೇ ಮನೆ ನಿರ್ಮಿಸುವ `ವಸತಿಯ ಆಸರೆ’ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಿಸುವ `ಆರೋಗ್ಯ ಸಂಪತ್ತು’ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಶಿಕ್ಷಣವೇ ಆಧುನಿಕ ಶಕ್ತಿ ಯೋಜನೆ, ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಸಿ ಬೆಲೆ ಶೇಖರಣ ವ್ಯವಸ್ಥೆ ಹಾಗೂ ಲಾಭದಾಯಕ ಮಾರುಕಟ್ಟೆ ನಿರ್ಮಿಸುವ ರೈತ ಚೈತನ್ಯ ಯಾತ್ರೆ ಯುವ ಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಯುವ ನವಮಾರ್ಗ ಹಾಗೂ ಮಹಿಳಾ ಸಬಲೀಕರಣ ಯೋಜನೆಗಳೇ ಪಂಚರತ್ನ ಯೋಜನೆಗಳಾಗಿದ್ದು, ಇವುಗಳ ಅನಷ್ಟಾನಕ್ಕೆ ಜೆಡಿಎಸ್ ಪಕ್ಷಕ್ಕೆ ಅಧಿಕಾರ ಕೊಡಿ ಎಂದರು.

ಕ್ಷೇತ್ರದ ಜನತೆ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ 2023ರಲ್ಲಿ ಎಚ್.ಡಿ‌‌.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರತಿ ಮನೆಗೂ ಪಂಚರತ್ನ ಯೋಜನೆಯ ಕರಪತ್ರ ತಲುಪಿಸುವ ಮೂಲಕ ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಚ್.ಎಸ್. ಮಂಜು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉದಯ್‌ಶಂಕರ್, ಜಿ.ಪಂ. ಮಾಜಿ ಸದಸ್ಯ ಎಚ್.ಎಂ. ಯೋಗೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ತಿಮ್ಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!