ಜಿಲ್ಲೆಯಲ್ಲಿ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ 12,843 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಂಡ್ಯ- 8, ಮದ್ದೂರು 5, ಮಳವಳ್ಳಿ-3, ಕೆ.ಆರ್ ಪೇಟೆ-3, ನಾಗಮಂಗಲ-3, ಶ್ರೀ ರಂಗಪಟ್ಟಣ- 2, ಪಾಂಡವಪುರ-3 ಸೇರಿದಂತೆ ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಗೋಡೆ ಗಡಿಯಾರ, ಡೆಸ್ಕ್ ಬೆಂಚ್ ಗಳು ಸೇರಿದಂತೆ ಇನ್ನಿತರರ ಮೂಲಭೂತ ಸೌಕರ್ಯಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಕ್ರಮವಹಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ 27 ಮುಖ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳ ವಿತರಣೆಗೆ 9 ಮಾರ್ಗಾಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗೆ ಬಳಸಲಾಗುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಬೇಕು. ಪ್ರಶ್ನೆಪತ್ರಿಕೆ ವಿತರಣೆ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿಗಳು ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ನೊಂದಣಿ ಮಾಡಿಸಿಕೊಳ್ಳಲು ಸೂಚಿಸಿದರು.
ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಎ ಅಥವಾ ಬಿ ಗುಂಪಿನ ಅಧಿಕಾರಿಗಳ ವಿಚಕ್ಷಣಾ ಜಾಗೃತದಳಗಳನ್ನು ರಚಿಸಲು ಕ್ರಮವಹಿಸಲಾಗುವುದು. ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಿದ್ದಲಿಂಗಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಜವರೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.




