ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಅವರ ಕಾರಿಗೆ ಮೊಟ್ಟೆ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಕೆಬಿಸಿ ಕಾಂಪ್ಲೆಕ್ಸ್ ನಲ್ಲಿ ಆಯೋಜನೆಗೊಂಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ವಿರುದ್ಧ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು ಪಕ್ಷಕ್ಕೆ ಅರ್ಜಿ ಸಲ್ಲಿಸಿರುವ 6 ಮಂದಿ ಆಕಾಂಕ್ಷಿತರ ಪೈಕಿ ಓರ್ವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಸಭೆ ನಡೆಸಬೇಕೆಂದು ಒತ್ತಾಯಿಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸರ್ವರನ್ನು ಸ್ವಾಗತಿಸಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಜಿಲ್ಲಾಧ್ಯಕ್ಷರು ಪ್ರತಿಕ್ರಿಯಿಸುತ್ತಾರೆ. ಕಾರ್ಯಕರ್ತರು ಸಂಯಮದಿಂದ ನಡೆದು ಕೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪಕ್ಷದ ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತಾರೆ. ಪಕ್ಷ ನಿರ್ಧರಿಸಿದ ಅಭ್ಯರ್ಥಿ ಪರವಾಗಿ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕು. ಪಕ್ಷಕ್ಕೆ ಸಚಿವರು ಆಗಮಿಸುವ ಬಗ್ಗೆ ಇನ್ನು ಯಾವುದೇ ನಿರ್ಧಾರವಾಗಿಲ್ಲ ಎಂದು ಹೇಳುತ್ತಿದ್ದಂತೆ, ಸಭೆಯಲ್ಲಿ ಕಾರ್ಯಕರ್ತರು ಜೋರಾಗಿ ಕೂಗಾಡುತ್ತಾ ಗದ್ದಲ ಆರಂಭಿಸಿದರು. ಆರು ಮಂದಿ ಆಕಾಂಕ್ಷಿತರ ಪೈಕಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಪಕ್ಷಕ್ಕೆ ಯಾವುದೇ ಕಾಣಿಕೆ ನೀಡದ ಸಚಿವ ನಾರಾಯಣಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ಚುನಾವಣೆಯಲ್ಲಿ ಪಕ್ಷಾಂತರಕ್ಕೆ ಒಳಗಾಗುವ ನಾರಾಯಣಗೌಡ ಅವರ ಪಕ್ಷ ಸೇರ್ಪಡೆಯಿಂದ ಪಕ್ಷ ದುರ್ಬಲವಾಗುತ್ತದೆ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭ್ರಮನಿರಸನಗೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಕಾರ್ಯಕರ್ತರ ವಿರೋಧವಿದ್ದರೂ ಅವರ ಆಕ್ರೋಶಕ್ಕೆ ಮಣಿಯದೆ ನಾರಾಯಣಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಪಕ್ಷದ ವಿವಿಧ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ತಟಸ್ಥ ನೀತಿ ಅನುಸರಿಸುತ್ತೇವೆ ಎಂದು ಎಚ್ಚರಿಸಿದರು.
ಈ ಮಧ್ಯೆ ಸಭೆಯಲ್ಲಿ ಕಾರ್ಯಕರ್ತರ ಕೂಗಾಟ ಹೆಚ್ಚಾದಾಗ ಸಭೆ ಮುಂದೂಡಿ ಹೊರ ನಡೆದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ವಾಹನವನ್ನು ತಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು, ಹಳೇ ಟೈರ್ ಸುಟ್ಟು, ವಾಹನಕ್ಕೆ ಮೊಟ್ಟೆ ಎಸೆದು ಆಕ್ರೋಶ ಹೊರ ಹಾಕಿದರು. ಈ ಬಗ್ಗೆ ಪಕ್ಷದ ವರಿಷ್ಠರು ತುರ್ತು ಗಮನಹರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚೇತನ್ಕುಮಾರ್, ಮಹೇಂದ್ರ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತ ಮುಖಂಡರುಗಳು ಪಾಲ್ಗೊಂಡಿದ್ದರು.
ಸಭೆಯಲ್ಲಿ ಸ್ಪರ್ಧಾಕಾಂಕ್ಷಿಗಳಾದ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮುಖಂಡರಾದ ವಿಜಯ್ ರಾಮೇಗೌಡ, ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನಾಗೇಂದ್ರ ಉಪಸ್ಥಿತರಿದ್ದರು.




