ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ಕನಿಷ್ಠ ವೇತನಕ್ಕೆ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ ಆಧಾರದ ಮೇಲಿನ ನೌಕರರು ಕೂಡಲೇ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮತದಾನ ಮಾಡುವುದಿಲ್ಲ ಎಂದು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಕಾನೂನಾತ್ಮಕ ಹೋರಾಟಕ್ಕೆ ಮಂಡ್ಯದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾಯಕಯೋಗಿ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಆಯೋಜಿಸಿದ್ದ ರಾಜ್ಯಮಟ್ಟದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಗಳ ನೌಕರರು ಬಹುದಿನಗಳ ಬೇಡಿಕೆಯನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ಮುಂದಾಗಬೇಕೆಂದು ಒತ್ತಾಯಿಸಿದರು.
ವಿವಿಧ ಜಿಲ್ಲೆಗಳ ಹೊರಗುತ್ತಿಗೆ ನೌಕರರು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೌಕರರ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಸೇರಿಸಬೇಕು. ರಾಜ್ಯ ಸರ್ಕಾರ ಕೂಡಲೇ ನಮ್ಮ ಕಾನೂನು ಬದ್ಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯಾದ್ಯಂತ ಕೆಲಸ ನಿರ್ವಹಿಸುತ್ತಿರುವ ಸರಿಸುಮಾರು 4 ಲಕ್ಷ ಮಂದಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಹಾಗೂ ನೌಕರರ ಕುಟುಂಬದ ಯಾವುದೇ ಸದಸ್ಯರು ಮತ ಚಲಾಯಿಸದೆ, ಚುನಾವಣೆಯನ್ನು ಬಹಿಷ್ಕರಿಸುವುದಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ, ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿದರು.
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಎಚ್.ಎಸ್.ಇಂದೂಧರ್ ಮಾತನಾಡಿ, ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರ ಕಾನೂನು ಬದ್ಧ 9ಬೇಡಿಕೆಗಳನ್ನು ಚುನಾವಣೆ ಘೋಷಿತಗೊಳ್ಳುವ ಮುಂಚೆ ಈಡೇರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದರು.
ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುತ್ತಿಗೆ ನೌಕರರನ್ನು ಸರ್ಕಾರಿ ಗುಲಾಮರಂತೆ ನಡೆಸಿಕೊಳ್ಳುತ್ತಿರುವುದು ಖಂಡನೀಯ. ಜೀತಪದ್ದತಿಯಿಂದ ಮುಕ್ತಿನೀಡಲು ಮುಖ್ಯಮಂತ್ರಿಗಳು ಕೂಡಲೇ ಮುಂದಾಗಬೇಕೆಂದು ಒತ್ತಾಯಿಸಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಶಿವಲಿಂಗೇಗೌಡ, ಕಾರ್ಯದರ್ಶಿ ತಬ್ರೈಸ್ಖಾನ್, ಬಾಗಲಕೋಟೆ ಅಧ್ಯಕ್ಷ ಈರಣ್ಣ, ಧಾರವಾಡ ಜಿಲ್ಲೆಯ ಬಸವರಾಜು, ಬಳ್ಳಾರಿ ಜಿಲ್ಲೆ ಅಧ್ಯಕ್ಷ ಲಿಂಗರಾಜು, ವಿಜಯನಗರ ಜಿಲ್ಲೆ ಅಧ್ಯಕ್ಷ ನಾಗರಾಜು, ಮೈಸೂರು ಜಿಲ್ಲೆಯ ಮನು ಕುಮಾರ್, ವಿಜಯಪುರ ವಿಜಯಕುಮಾರ್, ಉತ್ತರ ಕನ್ನಡದ ಸತೀಶ್, ಚಾಮರಾಜನಗರ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.




