ಮಳವಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಯತ್ತಂಬಾಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ ಪೂರ್ಣವಾಗದಿದ್ದರೂ ಶಾಸಕ ಅನ್ನದಾನಿ ಉದ್ಘಾಟನೆ ಮಾಡುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಬೆಳಿಗ್ಗೆ 11 ಗಂಟೆಗೆ ಶಾಸಕ ಅನ್ನದಾನಿ ಅಧ್ಯಕ್ಷತೆಯಲ್ಲಿ ಮೊರಾರ್ಜಿ ವಸತಿ ಶಾಲೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಅದೇ ಸಂದರ್ಭದಲ್ಲಿ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇವಲ ರಾಜಕೀಯ ಕಾರಣಗಳಿಗಾಗಿ ತರಾತುರಿಯಲ್ಲಿ ಶಾಲೆಯ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅನ್ನದಾನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣಾಧಿಕಾರಿಗೆ ತರಾಟೆಗೆ
ಅಪೂರ್ಣಗೊಂಡಿರುವ ವಸತಿ ಶಾಲೆಯ ಉದ್ಘಾಟನೆಗೆ ಹೇಗೆ ಅವಕಾಶ ನೀಡಿದ್ದೀರಿ ? ಇದಕ್ಕೆ ಜಿಲ್ಲಾಧಿಕಾರಿಯ ಅನುಮತಿ ಇದೆಯೇ ? ಇದ್ದರೆ ಅದರ ಪ್ರತಿಯನ್ನು ತೋರಿಸಿ ? ನೀವು ಏಕಪಕ್ಷೀಯವಾಗಿ ಶಾಸಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ. ನಾನು ಇಷ್ಟೆಕ್ಕೇ ಬಿಡುವುದಿಲ್ಲ ಹೈಕೋರ್ಟ್ ನಲ್ಲಿ ದೂರು ದಾಖಲಿಸುತ್ತೇನೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ಬೇವಿನಮಠ ಅವರನ್ನು ತರಾಟೆಗೆ ತೆಗೆದುಕೊಂಡರು.
ಇನ್ನೂ ಶೇ.30ರಿಂದ 40ರಷ್ಟು ಕಾಮಗಾರಿ ಬಾಕಿ ಇದೆ. ಹೀಗಿರುವಾಗ ತರಾತುರಿಯಲ್ಲಿ ಉದ್ಘಾಟನೆ ಮಾಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು. ಇದಕ್ಕೆ ಸಮಜಾಯಿಷಿ ನೀಡಿದ ಸಮಾಜ ಕಲ್ಯಾಣಾಧಿಕಾರಿ, ಈಗ ಕೇವಲ ಆಡಳಿತಾತ್ಮಕ ಕಚೇರಿಯನ್ನೆಷ್ಟೆ ಉದ್ಘಾಟನೆ ಮಾಡಲಾಗುತ್ತಿದೆ ಎಂದರು. ಇದರಿಂದ ಮತ್ತಷ್ಟು ಕುಪಿತಗೊಂಡ ನರೇಂದ್ರಸ್ವಾಮಿ, ಕೇವಲ ಆಡಳಿತಾತ್ಮಕ ಕಚೇರಿ ಉದ್ಘಾಟನೆ ಮಾಡುವುದಾದರೆ ಉದ್ಘಾಟನೆಯ ಕಲ್ಲನ್ನು ಅಳವಡಿಸುವಂತಿಲ್ಲ, ಕೇವಲ ಶಂಕುಸ್ಥಾಪನೆಯ ಬೋರ್ಡ್ ಮಾತ್ರವಿರಬೇಕು. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ
ಒಂದು ಹಂತದಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾ ಎಸ್ಸಿ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಸುರೇಶ್ ಕಂಠಿ, ಮುಖಂಡ ದ್ಯಾಪೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು. ಈ ಹಂತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಂದರ್ ರಾಜ್, ದೇವರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ತಾ.ಪಂ.ಮಾಜಿ ಅಧ್ಯಕ್ಷ ನಾಗೇಶ್, ವಿಶ್ವಾಸ್ ಆರ್. ಎನ್ ಮತ್ತಿತರರಿದ್ದರು.
ಪೊಲೀಸ್ ಭದ್ರತೆಯಲ್ಲಿ ಉದ್ಘಾಟನೆ
ಕಾಂಗ್ರೆಸಿಗರ ಪ್ರತಿಭಟನೆ ನಡುವೆಯೂ ಪೊಲೀಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಭದ್ರತೆಯಲ್ಲಿ ಶಾಸಕ ಅನ್ನದಾನಿ ಅವರು ವಸತಿ ಶಾಲೆಯ ಉದ್ಘಾಟನೆಯನ್ನು ನೆರವೇರಿಸಿದರು.
ತರುವಾಯ ಮಾತನಾಡಿದ ಅವರು, ಕಟ್ಟಡದ ಕೆಲ ಕಾಮಗಾರಿ ಅಪೂರ್ಣಗೊಂಡಿದ್ದರೂ ಆದ್ಯತೆ ಮೇರೆಗೆ ಪೂರ್ಣಗೊಳಸಲಾಗುವುದು. ನನ್ನ ರಾಜಕೀಯ ವಿರೋಧಿಗಳು, ಶಾಸಕರ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ. ಮಾಜಿ ಸಚಿವರ ಧೋರಣೆ ಸರಿಯಲ್ಲ. ಕ್ಷೇತ್ರದ ಜನತೆ ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದು, ವಿಪಕ್ಷದಲ್ಲಿ ಶಾಶ್ವತವಾಗಿ ಇರಬೇಕಾಗುತ್ತದೆ ಎಂದು ಎಚ್ಚರಿಸಿದರು.




