ಕರ್ನಾಟಕ ಸಾರ್ವತ್ರೀಕ ವಿಧಾನಸಭೆ ಚುನಾವಣೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ಸಂದೇಶ ನೀಡಿದ್ದಾರೆ. ಇದರಿಂದಾಗಿ ಸದ್ಯದಲ್ಲಿಯೇ ಚುನಾವಣೆ ಘೋಷಣೆಯಾಗಲಿದೆ ಎಂಬ ಸುಳಿವು ಸಿಕ್ಕಿದೆ.
ಏಪ್ರಿಲ್ ಅಥವಾ ಮೇ ನಲ್ಲಿ ಚುನಾವಣೆ ಸಾಧ್ಯತೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹಾಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.
ರಾಜ್ಯಕ್ಕೆ ಮೋದಿ
ಚುನಾವಣೆ ಘೋಷಣೆಗೆ ಮೊದಲು ಕರ್ನಾಟಕ್ಕೆ ಪ್ರಧಾನಿ ಮೋದಿ ಬಂದು ಹೋಗಲಿದ್ದಾರೆ. ಕರ್ನಾಟಕದ ಭೇಟಿಯಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.




