Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಅಸಮರ್ಪಕ ವಿದ್ಯುತ್ ಪೂರೈಕೆ ಕ್ರಮ ಖಂಡಿಸಿ ಸೆಸ್ಕ್ ಕಚೇರಿಗೆ ಮುತ್ತಿಗೆ

ವರದಿ : ಪ್ರಭು ವಿ.ಎಸ್. 

ಕಳೆದ ಎರಡು ತಿಂಗಳಿಂದಲೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿರುವ ಕ್ರಮ ಖಂಡಿಸಿ ತಾಲೂಕಿನ ಬೋರಾಪುರ, ಚಾಮನಹಳ್ಳಿ, ಹುಲಿಗೆರೆಪುರ ಗ್ರಾಮಸ್ಥರು ಸೆಸ್ಕ್ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಸೆಸ್ಕ್ ಕಚೇರಿ ಬಳಿ ಜಮಾವಣೆಗೊಂಡ ತಾಲೂಕಿನ ಹುಲಿಗೆರೆಪುರ, ಬೋರಾಪುರ, ಚಾಮನಹಳ್ಳಿ ಹಾಗೂ ಇನ್ನಿತರೆ ಗ್ರಾಮದ ರೈತರು ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು ಕಳೆದ ಎರಡು ತಿಂಗಳಿಂದಲೂ 7 ಗಂಟೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಬದಲು ಕೇವಲ 5 ಗಂಟೆ ವಿದ್ಯುತ್ ನೀಡುತ್ತಿದ್ದು ಇದರಿಂದಾಗಿ ಜಮೀನುಗಳಲ್ಲಿ ಬೆಳೆದು ನಿಂತಿರುವ ರಾಗಿ, ಕಬ್ಬು, ತೆಂಗು ರೇಷ್ಮೆ ಬೆಳೆಗಳು ಒಣಗುವ ಜತೆಗೆ ಅಧಿಕ ಪ್ರಮಾಣದ ನಷ್ಟ ಉಂಟಾಗುತ್ತಿರುವುದಾಗಿ ದೂರಿದರು.

ಹಗಲುವೇಳೆ 3 ರಾತ್ರಿ ವೇಳೆ 2 ಗಂಟೆ ವಿದ್ಯುತ್ ಸರಬರಾಜು ಮಾಡುತ್ತಿದ್ದು ತಾಲೂಕಿನಾದ್ಯಂತ ಚಿರತೆಗಳ ಹಾವಳಿ ಮಿತಿಮೀರಿದ್ದು ಆತಂಕದ ನಡುವೆಯೂ ರಾತ್ರಿ ವೇಳೆ ಜಮೀನುಗಳಿಗೆ ತೆರಳಿ ರೈತರು ಬೆಳೆಗಳಿಗೆ ನೀರು ಹರಿಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು ಇದರಿಂದಾಗಿ ಕಾಡು ಪ್ರಾಣಿಗಳಿಗೆ ರೈತರು ಬಲಿಯಾಗುತ್ತಿರುವ ಪ್ರಕರಣಗಳು ಕಂಡುಬಂದಿದ್ದು ಕೂಡಲೇ ಹಗಲು ವೇಳೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿದರು.

ಈ ಸಂಬಂಧ ಹಲವಾರು ಭಾರಿ ಅಧಿಕಾರಿಗಳ ಗಮನಕ್ಕೂ ತಂದರು ಇದುವರೆವಿಗೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿರುವ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.

ಬಳಿಕ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಎಇಇ ರಮೇಶ್ ಮಾತನಾಡಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ವಿಳಂಭವಾಗಿದ್ದು ತಮ್ಮ ಬೇಡಿಕೆಯ ಮನವಿ ಪತ್ರವನ್ನು ಮೇಲಧಿಕಾರಿಗಳ ಗಮನಕ್ಕೆ ತಂರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ವೇಳೆ ಸ್ಥಳೀಯ ಮುಖಂಡರಾದ ಚಾಮನಹಳ್ಳಿ ರಾಮಯ್ಯ, ನಾಗರಾಜು, ದಿನೇಶ್, ಪುಟ್ಟಸ್ವಾಮಿ, ಕುಮಾರ್, ಪುನೀತ್, ನಿಂಗರಾಜು, ಸಿದ್ದರಾಜು, ಯೋಗೇಶ್, ಮಹದೇವು ಇತರರು ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ