Friday, November 20, 2026

ಪ್ರಾಯೋಗಿಕ ಆವೃತ್ತಿ

ಕ್ಷೇತ್ರದ ಅಭಿವೃದ್ದಿಗಾಗಿ ಕಾಂಗ್ರೆಸ್ ಬೆಂಬಲಿಸಿ : ಪಿ.ಎಂ ನರೇಂದ್ರಸ್ವಾಮಿ

ಹೊಸ ಜನಪರ ಯೋಜನೆಗಳ ಮೂಲಕ ಮಳವಳ್ಳಿ ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ ಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ದಡಮಹಳ್ಳಿ, ರಾಗಿಬೊಮ್ಮನಹಳ್ಳಿ, ಸಾಹಳ್ಳಿ, ಹಾಡ್ಲಿ ಗ್ರಾಮಗಳ ಹಲವು ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಿದ ನಂತರ ಮಾತನಾಡಿದ ಅವರು, ಮೀಸಲು ಕ್ಷೇತ್ರದಲ್ಲಿ ಕಳೆದ ಅವಧಿಯಲ್ಲಿ ತಂದಿದ್ದ ಹಲವು ಯೋಜನೆಗಳು ನೆಲ ಕಚ್ಚಿದ್ದು, ಯೋಜನೆಗಳ ಪುನಾರಂಭದ ಜೊತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ದಿಗೊಳಿಸಲು ಕನಸು ಕಂಡಿರುವ ತನಗೆ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲ ನೀಡಬೇಕೆಂದು ಕೋರಿದರು.

ಶಾಸಕರ ದಿವ್ಯ ನಿರ್ಲಕ್ಷ್ಯದಿಂದಾಗಿ ರೈತರ ಬದುಕು ಹಸನು ಮಾಡುವ ಪೂರಿಗಾಲಿ ಹನಿ ನೀರಾವರಿ ಯೋಜನೆ, ಕಿರುಗಾವಲು ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆ, ಮಳವಳ್ಳಿ ಶಾಶ್ವತ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಪೂರ್ಣಗೊಂಡಿಲ್ಲ, ಜೊತೆಗೆ ಹೊಸ ಯೋಜನೆಗಳು ಕ್ಷೇತ್ರಕ್ಕೆ ಬಂದಿಲ್ಲ ಎಂದು ದೂರಿದರು.

ಜನರ ನೋವಿಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷವು ಅಧಿಕಾರ ಬಂದ ಕೂಡಲೇ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ 10 ಕೆಜಿ ಅಕ್ಕಿ, ಗೃಹಜ್ಯೋತಿ ಕಾರ್ಯಕ್ರಮದಡಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿ ಮಹಿಳೆಯ ಖಾತೆಗೆ ಮಾಸಿಕ 2 ಸಾವಿರ ರೂ ನಗದು ಜಮೆ ಮಾಡಲಾಗುವುದು ಎಂದರು.

ಐದು ವರ್ಷದ ಅವಧಿಯಲ್ಲಿ ಕ್ಷೇತ್ರವು ಯಾವುದೇ ಅಭಿವೃದ್ದಿ ಕಾಣದ ಹಿನ್ನೆಲೆಯಲ್ಲಿ ಬೇಸತ್ತ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಕಾಂಗ್ರೆಸ್‌ಗೆ ಸೆರ್ಪಡೆಗೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ, ಇತರೆ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವವರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ತೆರೆದಿರುತ್ತದೆ, ತನ್ನನ್ನು ನಂಬಿ ಬಂದ ಮುಖಂಡರಿಗೆ ಹಾಗೂ ಕಾರ್ಯಕರ್ತರ ಭರವಸೆಗಳನ್ನು ಈಡೇರಿಸಲು ಬದ್ದನಾಗಿರುತ್ತೇನೆಂದು ಹೇಳಿದರು.

ಯಾರ ಅವಧಿಯಲ್ಲಿ ಎಷ್ಟು ಅಭಿವೃದ್ದಿಯಾಗಿವೆ ಎನ್ನುವ ವಿಶ್ಲೇಷಣೆ ಮಾಡುವ ಕಾಲ ಬಂದಿದ್ದು, ಮತ ಕೇಳುವ ಬರುವ ನಾಯಕರನ್ನು ಮತದಾರರೇ ಪ್ರಶ್ನಿಸಿ ನಿಮ್ಮ ಸಾಧನೆ ಏನು ಎನ್ನುವುದನ್ನು ಕೇಳಬೇಕಿದೆ, ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಕೋರಿದರು.

ಇದೇ ಸಂದರ್ಭದಲ್ಲಿ ಮುಖಂಡರಾದ ವಿಶ್ವಾಸ್, ಕುಂದೂರು ಪ್ರಕಾಶ್, ವೇದಮೂರ್ತಿ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ