ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿರುವ ರಾಜ್ಯದ ಮಡಿವಾಳ ಸಮುದಾಯದ ಏಕೈಕ ನಾಯಕ ಹೆಚ್.ಎಂ.ಗೋಪಿಕೃಷ್ಣ ಅವರಿಗೆ ಕಾಂಗ್ರೆಸ್ ವರಿಷ್ಠರು ಬಿ.ಫಾರಂ ನೀಡಬೇಕೆಂದು ಮಂಡ್ಯ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಬಿ.ಟಿ.ಗುರುರಾಜ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಂ.ಗೋಪಿಕೃಷ್ಣ ಅವರು ಅತಿ ಹಿಂದುಳಿದ ಮಡಿವಾಳ ಸಮುದಾಯದವರಾಗಿದ್ದು, ಇಡೀ ರಾಜ್ಯದಲ್ಲಿ ಮಡಿವಾಳ ಸಮುದಾಯ ನಾಯಕರೆನಿಸಿಕೊಂಡು ಒಂದೇ ಒಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಅವಕಾಶ ಇದೆ. ಹಾಗಾಗಿ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ಕಳೆದ 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 2ನೇ ಸ್ಥಾನವನ್ನು ಪಡೆದಿದ್ದಾರೆ ಗೋಪಿಕೃಷ್ಣ ಅವರಿಗೆ ಈ ಬಾರಿ ಪಕ್ಷದಿಂದ ಟಿಕೆಟ್ ನೀಡಿದ್ದೇ ಆದರೆ ಖಂಡಿತ ಗೆಲ್ಲುತ್ತಾರೆ ಎಂಬ ವಿಶ್ವಾಸ, ನಂಬಿಕೆ ಸಮುದಾಯಕ್ಕೆ ಇದೆ. ಆದ್ದರಿಂದ ಹೆಚ್.ಎಂ.ಗೋಪಿಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಎಂ.ಎನ್.ರವಿ, ಮುಖಂಡರಾದ ರಮೇಶ್, ರಾಮಚಂದ್ರ, ಉಮಾಶಂಕರ್, ಮರೀಸ್ವಾಮಿ ಮತ್ತಿತರರಿದ್ದರು.




