ಪಂಚರತ್ನ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ನನಗೊಂದು ಅವಕಾಶ ಕೊಡಿ ಎಂದು
ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಆರ್. ರಾಮಚಂದ್ರು ಮತದಾರರಿಗೆ ಮನವಿ ಮಾಡಿದರು.
ಮಂಡ್ಯ ತಾಲ್ಲೂಕಿನ ಕೆರಗೋಡು ಹಾಗೂ ಬಸರಾಳು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಮೊದಲಿಗೆ ಬಿ.ಹೊಸೂರು ಕಾಲೋನಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚರತ್ನ ಯೋಜನೆಯ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸಲು ಜೆಡಿಎಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಂಡ್ಯ ಜಿಲ್ಲಾ ಕೇಂದ್ರಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡಲಾಗುವುದು. ನಾನು ನಿಮ್ಮ ಮನೆಯ ಹುಡುಗ, ಒಬ್ಬ ಬಡ ರೈತನ ಮಗನನ್ನು ಗುರುತಿಸಿ ಜೆಡಿಎಸ್ ಪಕ್ಷ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ. ನನ್ನನ್ನು ಗೆಲ್ಲಿಸಿ ನಿಮ್ಮ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಜೀಗುಂಡಿ ಪಟ್ಟಣ ಗ್ರಾಮದಿಂದ ಪ್ರಾರಂಭವಾದ ಚುನಾವಣಾ ಪ್ರಚಾರ ಬಿ.ಹೊಸೂರು, ಬಿಳಿದೇಗಲು, ಕೆ.ಗೌಡಗೆರೆ, ಹಂಚಳ್ಳಿ,ಜಿ.ಕೆಬ್ಬಳ್ಳಿ, ಗಂಟಗೌಡನಹಳ್ಳಿ, ಮಲ್ಲಘಟ್ಟ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಬಿಳಿದೇಗಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ, ಸದಸ್ಯರಾದ ಸುಮಾ, ಜಯಶಂಕರ್, ಕುಮಾರ್, ಮನ್ ಮುಲ್ ನಿರ್ದೇಶಕ ನೆಲ್ಲಿಗೆರೆ ಬಾಲು, ಜೆಡಿಎಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರಭಾಮಣಿ, ಮುಖಂಡ ಪ್ರತಾಪ್ ಸೇರಿದಂತೆ ಇತರರು ಭಾಗವಹಿಸಿದ್ದರು.




