ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮದಿನ ಅಂಗವಾಗಿ ವಿಶೇಷ ಪೂಜೆ ಮತ್ತು ದೊಡ್ಡಾಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದು ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರ ಹೇಳಿದರು.
ಮಂಡ್ಯ ನಗರದ ವಿದ್ಯಾನಗರದಲ್ಲಿರುವ ವಿದ್ಯಾಗಣಪತಿ ದೇವಾಲಯದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕ ಆಯೋಜಿಸಿದ್ದ ವಿಶೇಷ ಪೂಜೆ ಮತ್ತು ಹಣ್ಣು ಹಂಪಲು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಗಟ್ಟಿಯಾಗಿ ಸಂಘಟಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಕಲ್ಪ ಮಾಡೋಣ, ಕಾರ್ಯತತ್ಪರತೆ ಮೆರೆಯೋಣ ಎಂದು ನುಡಿದರು.
ದೇವೇಗೌಡರ ಆರೋಗ್ಯ ವೃದ್ದಿಸಲಿ, ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ದಿ ಕಾಣಲು ಸಾಧ್ಯವಾಗುವಂತ ಶಕ್ತಿಯನ್ನು ದೇವರು ಕರುಣಿಸಲಿ, ಜನಾಶೀರ್ವಾದಿಂದ ರಾಜ್ಯ ಸುಭೀಕ್ಷದೆಡೆಗೆ ಸಾಗುವಂತಹ ದಿನಗಳು ಬರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.




