ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾದ್ಯಂತ ಆಗ್ರಹ ಕೇಳಿ ಬಂದಿದೆ. ಈ ಬಾರಿ ಮಳವಳ್ಳಿ ವಿಧಾನಸಭಾ ಚುನಾವಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜಯಗಳಿಸಿರುವುದು, ನರೇಂದ್ರಸ್ವಾಮಿ ಅವರಿಗೆ ಇರುವ ಜನಪ್ರಿಯತೆಯನ್ನು ತೋರಿಸುತ್ತದೆ ಎಂಬುದು ಜನತೆ ಅಭಿಪ್ರಾಯವಾಗಿದೆ.
2008ರಲ್ಲಿ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದ ಪಿ.ಎಂ ನರೇಂದ್ರಸ್ವಾಮಿ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2013ರಲ್ಲಿ ಕಾಂಗ್ರೆಸ್ ನಿಂದ 2ನೇ ಬಾರಿಗೆ ಗೆಲುವು ಸಾಧಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದರು. 2013ರಲ್ಲಿ ಮೂರನೇ ಭಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಅಪಾರ ಅನುಭವವಿರುವ ಪಿ.ಎಂ ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ನಾಯಕ ಚಲುವರಾಯಸ್ವಾಮಿ ಅವರ ಜೊತೆಗೂಡಿ ಕಾಂಗ್ರೆಸ್ ಪಕ್ಷವನ್ನು ಅಭೂತ ಪೂರ್ವವಾಗಿ ಸಂಘಟಿಸಿ, ವಿಧಾನ ಪರಿಷತ್ ಚುನಾವಣೆಯಲ್ಲಿ ದಿನೇಶ್ ಗೂಳೀಗೌಡ ಮತ್ತು ಮಧು ಮಾದೇಗೌಡರ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಭೇದಿಸಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಕಾರಣರಾಗಿರುವ ಇವರಿಗೆ ಮಂತ್ರಿ ಗಿರಿ ನೀಡಬೇಕೆಂದು ಜಿಲ್ಲೆಯ ಜನರ ಆಗ್ರಹವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಚುನಾವಣೆ ನಡೆದರೂ ಕೂಡ ಪಿ.ಎಂ ನರೇಂದ್ರಸ್ವಾಮಿ ಅವರ ಚುನಾವಣಾ ಚಾಣಾಕ್ಷತನದಿಂದ ಮಳವಳ್ಳಿಯಿಂದಲೇ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಮತಗಳನ್ನು ಪಡೆಯುವುದು ಗಮನಾರ್ಹ ವಿಷಯವಾಗಿದೆ. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಪುರಸಭೆ, ಡಿಸಿಸಿ ಬ್ಯಾಂಕ್, ಮನ್ಮುಲ್ ಸೇರಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಿ.ಎಂ ನರೇಂದ್ರಸ್ವಾಮಿ ಅವರ ಪರಿಶ್ರಮದಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ.
ಭಾರತ್ ಜೋಡೋ ಪಾದಯಾತ್ರೆ, ಮೇಕೆದಾಟು ಪಾದಯಾತ್ರೆ, ಸಿದ್ದರಾಮೋತ್ಸವ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕಾರ್ಯಕ್ರಮಗಳಿಗೆ ಅಪಾರ ಜನವನ್ನು ಸಂಘಟಿಸಿ ಕರೆದುಕೊಂಡು ಹೋಗಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿರುವ ಪಿ.ಎಂ ನರೇಂದ್ರಸ್ವಾಮಿ ಅವರು ಪಕ್ಷ ಕೊಟ್ಟ ಜಾವಾಬ್ದಾರಿಗಳನ್ನು ನಿಷ್ಠೆಯಿಂದ ಪೂರೈಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪಿ.ಎಂ ನರೇಂದ್ರಸ್ವಾಮಿ ಅವರು ಹಿಂದೆ ಶಾಸಕರಾಗಿದ್ದಾಗ ಮಳವಳ್ಳಿಗೆ ಅಂಬೇಡ್ಕರ್ ಭವನ, ಪೂರಿಗಾಲಿ ಹನಿ ನೀರಾವರಿ ಯೋಜನೆ, ಆಧುನೀಕ ಮೀನು ಮಾರುಕಟ್ಟೆ, ಕೆಎಸ್ಆರ್ಟಿಸಿ ಚಾಲಕ ತರಬೇತಿ ಕೇಂದ್ರ, ಸ್ತ್ರೀ ಶಕ್ತಿ ಭವನ, ಶಾಶ್ವತ ಕುಡಿಯುವ ನೀರು ಯೋಜನೆ, ಏತನೀರಾವರಿ ಯೋಜನೆ ಅನುಷ್ಠಾನ, ಎಪಿಎಂಸಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಅಗ್ನಿಶಾಮಕ ದಳ ಠಾಣೆ, ರಸ್ತೆ ಅಗಲೀಕರಣ, ಶಿಕ್ಷಣ, ನೀರಾವರಿ, ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ದಿ ಪಡಿಸುವುದರ ಜೊತೆಗೆ ಶಾಸಕರಾಗಿ ತಮ್ಮ ಕರ್ತವ್ಯವನ್ನು ಉತ್ತಮರೀತಿಯಲ್ಲಿ ನಿಭಾಯಿಸಿ ದಕ್ಷ ಆಡಳಿತಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಎಲ್ಲಾ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ಜನತೆಯ ಒತ್ತಾಯವಾಗಿದೆ.




