Wednesday, November 18, 2026

ಪ್ರಾಯೋಗಿಕ ಆವೃತ್ತಿ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಒಂದು ತಿಂಗಳಿನಿಂದ ರಾಜ್ಯ ನೌಕರರು ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ವಹಿಸಿಕೊಂಡ ತಿಂಗಳಲ್ಲೇ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರಿಗೆ ಮೊದಲ ಸಿಹಿ ಸುದ್ದಿ ನೀಡಿದ್ದಾರೆ.

ಕೇಂದ್ರ ಸರ್ಕಾರದಂತೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬುಧವಾರ ಸಹಿ ಹಾಕಿದ್ದರು. ಆರ್ಥಿಕ ಇಲಾಖೆ ಈ ಸಂಬಂಧ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ.

ಏಪ್ರಿಲ್ 3ರಂದು ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರವು ಈಗ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.

7ನೇ ವೇತನ ಆಯೋಗದ ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಹಿಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹೆಚ್ಚಳವನ್ನು ಏಪ್ರಿಲ್ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗಿದೆ.

ಅಲ್ಲದೇ ಹಿಂದಿನ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು.

ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ