ಪರಿಸರವನ್ನು ಮನುಷ್ಯರು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಪರಿಸರವನ್ನು ಉಳಿಸಿ ಮುಂದಿನ ಪೀಳಿಗೆಗೂ ನೀಡುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ, ಮೈಸೂರು ಸಕ್ಕರೆ ಕಾರ್ಖಾನೆ, ವಲಯ ಅರಣ್ಯ ಅಧಿಕಾರಿಗಳ ಕಚೇರಿ ಪ್ರಾದೇಶಿಕ ಅರಣ್ಯ ವಿಭಾಗ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಇವರ ವತಿಯಿಂದ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿಂದು ವಿಶ್ವ ಪರಿಸರ ದಿನದ ಪ್ರಯುಕ್ತ ಏರ್ಪಡಿಸಿದ್ದ ಸಸ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರವನ್ನು ಉಳಿಸುವ ಕೆಲಸ ಈಗಿನಿಂದಲೇ ಪ್ರಾಂರಭಿಸಿ, ಪರಿಸರದ ಬಗ್ಗೆ ಸಾಧನೆ ಮಾಡಬೇಕು. ಜೂನ್ ಐದಕ್ಕೆ ಪರಿಸರ ದಿನ ಸೀಮಿತವಾಗದೇ ವರ್ಷ ಪೂರ್ತಿ ಪರಿಸರ ದಿನ ಆಚರಿಸುವಂತಾಗಬೇಕು. ಮಾನವನ ಮಿತಿಮೀರಿದ ಆಸೆಯಿಂದ ಪರಿಸರದ ಮೂಲವಾದ ಅರಣ್ಯ ನಾಶವಾಗುತ್ತಿದ್ದು, ಜಲ ಮೂಲಗಳು ಬತ್ತಿಹೋಗುತ್ತಿದ್ದು, ಪರಿಸರ ಕಲುಷಿತವಾಗುತ್ತಿದೆ ಪರಿಸರದ ಉಳಿವಿಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಪ್ರತಿಯೊಬ್ಬರು ಪರಿಸರದ ಉಳಿವಿಗೆ ಕೈಜೋಡಿಸಬೇಕು ಎಂದರು.
ಯುವಜನರು ಹಾಗೂ ಮಕ್ಕಳಿಗೆ ಚಿಕ್ಕಂದಿನಿಂದಲೆ ಪರಿಸರದ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಶಾಲಾ-ಕಾಲೇಜು ಪಠ್ಯದಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಿಸಿರುವ ಕೃಷ್ಣರಾಜಸಾಗರ, ಮೈಸೂರು ಸಕ್ಕರೆ ಕಾರ್ಖಾನೆ ಮಂಡ್ಯ ಜಿಲ್ಲೆಯ ಜನರ ಅಭಿವೃದ್ಧಿಗೆ ಕಾರಣವಾಗಿವೆ. ರೈತರ ಬೆಳವಣಿಗೆಗೆ ಮೂಲ ಕಾರಣವಾಗಿರುವ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭ ಮಾಡಲು ಸರ್ಕಾರ ಚಾಲನೆ ಕೊಟ್ಟಿದೆ ಅದನ್ನು ಉಳಿಸಿಕೊಂಡು ಹೋಗುವ ಕೆಲಸವನ್ನು ಜನರು ಮಾಡಬೇಕು ಎಂದರು.
ಮಂಡ್ಯ ಜಿಲ್ಲೆಯಲ್ಲಿ ಪರಿಸರದ ಬಗ್ಗೆ ಪ್ರಾಚೀನ ಸ್ಮಾರಕಗಳು ಹಾಗೂ ಹಲವು ಶಾಸನಗಳು ಇವೆ. ಜೋಳರು ಹಾಗೂ ಹೊಯ್ಸಳರು ನಿರ್ಮಿಸಿರುವ ಐತಿಹಾಸಿಕ ಮತ್ತು ಸಾಂಸ್ಕಂತಿಕ ಘಟಕಗಳು ಬಹಳಷ್ಟು ಕಡೆ ಇವೆ ಅವುಗಳ ಬಗ್ಗೆ ಜಿಲ್ಲೆಯ ಜನರಿಗೆ ಅರಿವು ಮೂಡಿಸಬೇಕಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ತಿಳಿಸಿದರು.
ಜಿಲ್ಲೆಯ ಜನರು ಪಾರಂಪರಿಕ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಗಮನಹರಿಸುವ ಅವಶ್ಯಕತೆ ಇದೆ. ಪರಿಸರ, ಪಾರಂಪರಿಕ ಇತಿಹಾಸ ಹಾಗೂ ಅರಣ್ಯವನ್ನು ಸರಿಯಾಗಿ ನೋಡಿಕೊಂಡು ಕಾಪಾಡಿಕೊಂಡು ಬರುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪಾ ಸಾಹೇಬ್, ಪರಿಸರ ಅಧಿಕಾರಿ ಬಿ.ಪಿ.ಗೀತಾ, ಮೈಶುಗರ್ ಪ್ರಧಾನ ವ್ಯವಸ್ಥಾಪಕ ಎನ್.ಆರ್. ವೇಣುಗೋಪಾಲ್, ಅರಣ್ಯ ಅಧಿಕಾರಿ ಶಂಕರೇಗೌಡ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




