ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಶುಕ್ರವಾರ ಮಧ್ಯರಾತ್ರಿಯಿಂದಲೇ ನೀರು ಹರಿಸಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಅಚ್ಚುಕಟ್ಟು ವ್ಯಾಪ್ರಿಯಲ್ಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ರೈತರು ಕೂಡಲೇ ನೀರು ಬಿಡುಗಡೆ ಮಾಡುವಂತೆ ರೈತರು ಹೋರಾಟ ನಡೆಸಿದ್ದರು. ಈ ಹೋರಾಟಕ್ಕೆ ಮಣಿದ ಸರ್ಕಾರ, ಕೆಆರ್’ಎಸ್ ಅಚ್ಚುಕಟ್ಟು ಪ್ರದೇಶದ ಕೆರೆಗಳಲ್ಲಿ ಶೇ.20ಕ್ಕಿಂತಲೂ ಕಡಿಮೆ ನೀರಿನ ಸಂಗ್ರಹಣೆ ಇದ್ದು, ಈ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ,ರಾಮನಗರ, ಬೆಂಗಳೂರಿನ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೆರೆ ಕಟ್ಟೆ ತುಂಬಿಸಲು ನಾಲೆ ಹಾಗೂ ನದಿ ಮೂಲಕ ಹತ್ತು ದಿನ ನೀರು ಹರಿಸಲಾಗುವುದು ಎಂದು ತಿಳಿಸಿದೆ.
ರೈತರು ಹೊಸದಾಗಿ ಯಾವುದೇ ಬೆಳೆಯನ್ನು ಹಾಕದೇ ಜನ, ಜಾನುವಾರುಗಳ ಕುಡಿಯುವ ನೀರಿಗಾಗಿ ಮಾತ್ರ ಮಿತವಾಗಿ ಬಳಸಬೇಕೆಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




