ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ರಾಜ್ಯದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸಲು ರೂ.47 ಕೋಟಿ ವೆಚ್ಚದ ಪ್ರಸ್ತಾವನೆಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು “ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ” ಎಂದು ಮರುನಾಮಕರಣ ಮಾಡಲು ಹಾಗೂ ಈ ಮಂಡಳಿಯ ವ್ಯಾಪ್ತಿಗೆ ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ 23 ತಾಲೂಕುಗಳನ್ನು ಒಳಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಂಗನವಾಡಿಗಳಿಗೆ ಸನ್ ಪ್ಯೂರ್ ಎಣ್ಣೆ
ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅವಶ್ಯಕವಾದ ಲಿನೋಲಿಕ್ ಮತ್ತು ಅಲ್ಫಾ ಲಿನೋಲಿಕ್ ಆ್ಯಸಿಡ್‌ಗಳು ಸೂರ್ಯಕಾಂತಿ ಎಣ್ಣೆಯಲ್ಲಿ ಇರುವ ಕಾರಣಕ್ಕಾಗಿ ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನುಮುಂದೆ ಪಾಮೊಲಿನ್ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ನಿನ್ನೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.




