Sunday, October 27, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರದ ಜನಪರ ಕೆಲಸಕ್ಕೆ ಬಿಜೆಪಿ- ಜೆಡಿಎಸ್ ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿವೆ; ದಿನೇಶ್ ಗೂಳಿಗೌಡ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮೇಲೆ ಕೇಳಿ ಬಂದಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಜನಪರ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನವರು ಹೆಜ್ಜೆ ಹೆಜ್ಜೆಗೂ ಅಡ್ಡಿ ಪಡಿಸುತ್ತಾ ಬಂದಿದ್ದಾರೆ. ಜನಪರ ಕಾರ್ಯಕ್ರಮಗಳನ್ನು ಸಹಿಸದೇ ಜನರ ಗಮನವನ್ನು ಬೇರೆ ಕಡೆಗೆ ಎಳೆಯಲು ವಿರೋಧ ಪಕ್ಷಗಳು ಒಂದಾಗಿವೆ ಎಂದು ಶಾಸಕ ದಿನೇಶ್ ಗೂಳಿಗೌಡ ಕಿಡಿಕಾರಿದರು.

ಸಚಿವರ ಮೇಲೆ ಅಪಪ್ರಚಾರ ಮಾಡಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯ ನಡೆಯನ್ನು ಖಂಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ಕಾರಣವಿಲ್ಲದೆ, ಸುಳ್ಳು ಭ್ರಷ್ಟಾಚಾರದ ಆರೋಪವನ್ನು ಮಾಡುತ್ತಲಿದ್ದಾರೆ. ಆದರೆ, ಇದರಲ್ಲಿ ಅವರು ಯಶಸ್ಸು ಕಾಣುವುದಿಲ್ಲ ಎಂದು ತಿರುಗೇಟು ನೀಡಿದರು.

ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರಿಗೆ ಉಪಯೋಗ

ಕಾಂಗ್ರೆಸ್ ಘೋಷಣೆ ಮಾಡಿರುವ ಪ್ರಮುಖ 5 ಗ್ಯಾರಂಟಿಗಳಲ್ಲಿ ನಾಲ್ಕನ್ನು ಜಾರಿ ಮಾಡಿದೆ. ಇದರಲ್ಲಿ ಶಕ್ತಿ ಯೋಜನೆಯಡಿ ನೀಡಲಾಗಿರುವ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯಲ್ಲಿ 87 ಲಕ್ಷದ 35 ಸಾವಿರ ಮಹಿಳಾ ಪ್ರಯಾಣಿಕರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ 4.77 ಲಕ್ಷ ರೇಷನ್ ಕಾರ್ಡ್‌ಗಳು ಜಿಲ್ಲೆಯಲ್ಲಿವೆ. ಇದರಲ್ಲಿ 3.99 ಲಕ್ಷ ಜನರ ಖಾತೆಗೆ ನೇರವಾಗಿ ಡಿಬಿಟಿ ಮುಖಾಂತರ ಹಣವನ್ನು ವರ್ಗಾವಣೆ ಮಾಡಲಾಗಿದೆ. ಇವರಲ್ಲಿ 4.77 ಲಕ್ಷ ರೇಷನ್ ಕಾರ್ಡ್‌ ಹೊಂದಿರುವವರಲ್ಲಿ 20 ಲಕ್ಷ ಮಂದಿ ಮರಣ ಹೊಂದಿದ್ದಾರೆ. ಉಳಿದವರಲ್ಲಿ ಬ್ಯಾಂಕ್ ಖಾತೆ, ಆಧಾರ್ ಮಾಹಿತಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯುತ್ತಿವೆ ಎಂದರು.

4 ಲಕ್ಷ ಕುಟುಂಬಗಳಿಗೆ ಗೃಹಲಕ್ಷ್ಮಿ ಪ್ರಯೋಜನ

ಇನ್ನು ಗೃಹ ಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು ಮಂಡ್ಯ ಜಿಲ್ಲೆಯಲ್ಲಿ ಶೇ. 82 ಇವೆ. ಸುಮಾರು 5 ಲಕ್ಷ ಕುಟುಂಬಗಳಲ್ಲಿ ಶೇ. 82ರಷ್ಟು ಕುಟುಂಬಗಳು ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯುತ್ತಿವೆ. ಗೃಹ ಲಕ್ಷ್ಮಿ ಯೋಜನೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ 5ನೇ ಸ್ಥಾನದಲ್ಲಿದೆ. ಸುಮಾರು 4 ಲಕ್ಷಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಗೃಹಲಕ್ಷ್ಮಿ ಯೋಜನೆಯಲ್ಲಿ 2 ಸಾವಿರ ರೂಪಾಯಿಯನ್ನು ಪಡೆಯಲಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ತಿಳಿಸಿದರು.

ಜಾಹೀರಾತು

ಮೈಷುಗರ್ ಗೆ 50 ಕೋಟಿ ರೂಪಾಯಿ

ಮೈಷುಗರ್ ಸಕ್ಕರೆ ಕಾರ್ಖಾನೆಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 50 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗ ಕಾರ್ಖಾನೆ ಪ್ರಾರಂಭವಾಗಿದ್ದು, ಈಗಾಗಲೇ 75 ಸಾವಿರ ಟನ್ ಕಬ್ಬನ್ನು ಕಾರ್ಖಾನೆ ಅರೆದಿದೆ. ಪ್ರತಿ ದಿನ 2600ರಿಂದ 2800 ಟನ್‌ವರೆಗೆ ಕಬ್ಬನ್ನು ನುರಿಸಲಾಗುತ್ತಿದೆ. ಇಷ್ಟೆಲ್ಲ ಅಭಿವೃದ್ಧಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಕೆಲಸವನ್ನು ಸಹಿಸದ ವಿರೋಧ ಪಕ್ಷದವರು ನಮ್ಮ ಸರ್ಕಾರ ಹಾಗೂ ನಾಯಕರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವಾರದ ಚಲುವರಾಯಸ್ವಾಮಿ ಅವರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಕನಸನ್ನು ಹೊಂದಲಾಗಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರಿಂದ ವಿರೋಧ ಪಕ್ಷದವರು ಮತ್ತಷ್ಟು ಭ್ರಮ ನಿರಸನ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದರಲ್ಲಿ ಅವರು ಯಶಸ್ಸು ಆಗುವುದಿಲ್ಲ. ಈ ಎಲ್ಲವನ್ನೂ ಬಿಟ್ಟು ನಮ್ಮ ಅಭಿವೃದ್ಧಿ ಕೆಲಸಗಳಿಗೆ ವಿರೋಧ ಮಾಡದೆ ಕೈಜೋಡಿಸಿ ಎಂದು ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!