Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮುಂದುವರೆದ ಸಚಿವ ಚಲುವರಾಯಸ್ವಾಮಿ ಪರ- ವಿರುದ್ದದ ಪ್ರತಿಭಟನೆ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಸುಳ್ಳುಪತ್ರ ಸೃಷ್ಠಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು, ಹಾಗೂ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕೂಡಲೇ ರಾಜೀನಾಮೆಗೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಮಂಡ್ಯನಗರದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರವು ಮುಂದುವರೆದಿದೆ.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯಲ್ಲಿ ಇಂದು ನಾಗಮಂಗಲ ಹಾಗೂ ಮಳವಳ್ಳಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ, ಬಿಜೆಪಿ ಪಕ್ಷ ದಲಿತ, ಕಾರ್ಮಿಕ, ಮಹಿಳೆಯರ ಮತ್ತು ಸಂವಿಧಾನ ವಿರೋಧಿಯಾಗಿದೆ ಬಿಜೆಪಿ ತೊಲಗಲಿ ಎಂದು ಆಗ್ರಹಿಸಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು

ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಸುಳ್ಳು ದೂರು ಸಲ್ಲಿಸಿದ್ದು, ಇದೊಂದು ಸುಳ್ಳು ದೂರು ಎಂಬುದು ಈಗಾಗಲೇ ಗೊತ್ತಾಗಿದೆ. ಪ್ರಕರಣ ಕುರಿತು ಸಿಐಡಿ ತನಿಖೆ ಚುರುಕುಗೊಂಡಿದೆ, ಸದ್ಯದಲ್ಲಿಯೇ ನಕಲಿ ದೂರಿನ ವಾಸ್ತವ ಬಯಲಾಗಲಿದೆ, ಆದರೂ ಸಹ ಬಿಜೆಪಿ ಪಕ್ಷ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ ವಾಗಿದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಎಂ ದ್ಯಾವಪ್ಪ, ಯುವ ಮುಖಂಡ ಸುಂಡಹಳ್ಳಿ ಮಂಜುನಾಥ್, ನಾಗಮಂಗಲ ಕಾಂಗ್ರೆಸ್ ಮುಖಂಡರಾದ ಹೆಚ್.ಟಿ.ಕೃಷ್ಣೇಗೌಡ, ಜಿ.ಪಂ. ಮಾಜಿ ಸದಸ್ಯ ಪ್ರಸನ್ನ, ತಾ.ಪಂ. ಮಾಜಿ ಸದಸ್ಯ ರಾಜೇಶ್, ಮಳವಳ್ಳಿ ಕಾಂಗ್ರೆಸ್ ಮುಖಂಡ ದೇವರಾಜು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಪಾಲ ಭೇಟಿ – ಅಶ್ವತ್ ನಾರಾಯಣ್

ಅಧಿಕಾರಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಸಚಿವ ಚಲುವರಾಯಸ್ವಾಮಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿ, ಮಾಜಿ ಎಂ ನೇತೃತ್ವದಲ್ಲಿ ಆ. 17 ರಂದು ಬಿಜೆಪಿ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಲಿದೆ ಎಂದು ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಹೇಳಿದರು.

ಮಂಡ್ಯ ಜಿಲ್ಲಾ ನಡೆಸುತ್ತಿರುವ ಆಹೋ ರಾತ್ರಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಮಂಡ್ಯದಿಂದ ಹೋರಾಟ ಆರಂಭವಾಗಿದೆ. ಪಕ್ಷದಿಂದ ರಾಜ್ಯಪಾಲರ ಬಳಿಗೆ ನಿಯೋಗ ತೆರಳಲಿದೆ, ಪಕ್ಷದ ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ನಿಯೋಗದಲ್ಲಿ ಇರಲಿದ್ದಾರೆ ಎಂದರು.

ಕೃಷಿ ಇಲಾಖೆ ಅಧಿಕಾರಿಗಳು ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುತ್ತಿಗೆದಾರರ ಬಳಿ ಕಮಿಷನ್ ಗಾಗಿ ಪೀಡಿಸುತ್ತಿದ್ದಾರೆ. ಇಂತಹ ಭ್ರಷ್ಟ ಸಚಿವರನ್ನು ಸಂಪುಟದಿಂದ ವಜಾ ಮಾಡುವುದರ ಜೊತೆಗೆ ಪ್ರಕರಣ ಕುರಿತು ಲೋಕಾಯುಕ್ಕ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಡಾ.ಇಂದ್ರೇಶ್, ಇಂಡುವಾಳು ಸಚ್ಚಿದಾನಂದ, ಎಸ್.ಪಿ.ಸ್ವಾಮಿ, ಚೇತನ್ ಗೌಡ, ವಿವೇಕ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ