ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಸರ್ಕಾರದ ವಿರುದ್ಧ ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ( ಮೂಲ ಸಂಘಟನೆ ) ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಧರಣಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣರಾಜ ಸಾಗರ ಜಿಲ್ಲೆಯ ರೈತರ ಬದುಕಿಗೆ ಜೀವನಾಡಿಯಾಗಿದೆ. ಮುಂಗಾರು ಮಳೆ ಸಮಯದಲ್ಲಿ ಜಲಾಶಯ ಭರ್ತಿಯಾಗಬೇಕಾಗಿತ್ತು. ಆದರೆ ಮಳೆ ಕೊರತೆ ಹಿನ್ನೆಲೆಯಲ್ಲಿ 110 ಅಡಿ ವರೆಗೆ ಮಾತ್ರ ಜಲಾಶಯದಲ್ಲಿ ನೀರಿದ್ದು, ಆದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಕಿಡಿಕಾರಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಪರಿಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಮನದಟ್ಟು ಮಾಡಿಸಿ ಜಿಲ್ಲೆಯ ರೈತರ ಹಿತವನ್ನು ಕಾಪಾಡಬೇಕೆಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಜಿಲ್ಲೆಯ ರೈತರ ಪರ ನಿಲ್ಲದಿದ್ದರೆ ಜಿಲ್ಲೆಯ ಜನಪ್ರತಿನಿಧಿಗಳು, ಮಂತ್ರಿಗಳು, ಲೋಕಸಭಾ ಸದಸ್ಯರ ವಿರುದ್ಧ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ರೈತಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್ ಗೌಡ, ಮುಖಂಡರಾದ ಹೆಚ್. ಜೆ. ಪ್ರಭುಲಿಂಗ, ವೈ.ಕೆ.ರಾಮೇಗೌಡ, ಕೆ.ರಾಮಲಿಂಗೇಗೌಡ, ವೆಂಕಟೇಶ್ ಮತ್ತಿತರರು ನೇತೃತ್ವ ವಹಿಸಿದ್ದರು.




