ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ”ಶಕ್ತಿ ಯೋಜನೆ”ಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ನಂತರದಿಂದ ಈವರೆಗೆ 40 ಕೋಟಿ ಮಂದಿ (ಒಟ್ಟು ಪ್ರಯಾಣಿಕರ ಸಂಖ್ಯೆ) ಉಚಿತವಾಗಿ ಪ್ರಯಾಣ ಮಾಡಿದ್ದು, ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.




