ಬುಡ ಸಮೇತ ತೆಂಗಿನ ಮರವೊಂದು ಉರುಳಿ ಬಿದ್ದ ಪರಿಣಾಮ 15 ವಿದ್ಯುತ್ ಕಂಬಗಳು ಮುರಿದು ನೆಲಕಚ್ಚಿದ ಘಟನೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಮಂಡ್ಯ ತಾಲ್ಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ.
ಮಂಡ್ಯದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಪಕ್ಕದಲ್ಲಿರುವ ರಸ್ತೆ ಕಿರಗಂದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿರುವ ಕಿರಗಂದೂರು ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಬಳಿ ರಸ್ತೆ ಪಕ್ಕಕ್ಕೆ ಇದ್ದ ತೆಂಗಿನ ಮರ ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬುಡ ಸಮೇತ ಉರುಳಿ ರಸ್ತೆ ಪಕ್ಕದಲ್ಲಿರುವ ವಿದ್ಯುತ್ ಕಂಬದ ಮೇಲೆಬಿದ್ದ ಪರಿಣಾಮ ಸುಮಾರು ಹದಿನೈದು ವಿದ್ಯುತ್ ಕಂಬಗಳು ಮುರಿದು ರಸ್ತೆಗೆ ಬಿದ್ದಿದೆ.ಈ ಸಂದರ್ಭದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಅದೃಷ್ಟವಶಾತ್ ಯಾವುದೇ ಗಂಭೀರ ಅನಾಹುತ ಸಂಭವಿಸಿಲ್ಲ.ಕೂಡಲೇ ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ಎರಡೂ ಕಡೆ ಬ್ಯಾರಿಕೇಡ್ ಹಾಕಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಇಂದು ಬೆಳಿಗ್ಗೆ ಚೆಸ್ಕಾಂ ಅಧಿಕಾರಿಗಳು ಮುರಿದು ಬಿದ್ದ ವಿದ್ಯುತ್ ಕಂಬ ತೆರವು ಗೊಳಿಸಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸುವ ಕೆಲಸ ಮಾಡುತ್ತಿದ್ದು,ಇಂದು ಸಂಜೆ ವೇಳೆಗೆ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡುವುದಾಗಿ ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ.




