ಕನ್ನಂಬಾಡಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಂಬಾಡಿ ಅಣೆಕಟ್ಟೆಯ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ಧರಣಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದು, ರಾಜ್ಯ ಸರ್ಕಾರ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುತ್ತಿರುವುದನ್ನು ಖಂಡಿಸಿ ಕೂಡಲೇ ನೀರು ನಿಲ್ಲಿಸುವಂತೆ ಒತ್ತಾಯಿಸಿದರು.
ಈಗಾಗಲೇ ಕನ್ನಂಬಾಡಿ ಜಲಾಶಯ 101 ಅಡಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಇನ್ನು 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಹರಿಸಿದರೆ, ಸುಮಾರು ಏಳು ಟಿಎಂಸಿ ನೀರು ಖಾಲಿಯಾಗಲಿದೆ. ಇದರಿಂದ ರೈತರು ಭಾರೀ ಸಂಕಷ್ಟವನ್ನು ಎದುರಿಸ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಲಿದೆ.ಆದ್ದರಿಂದ ಕೂಡಲೇ ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಾಸ್ತವಂಶವನ್ನು ಮನವರಿಕೆ ಮಾಡಿ ನೀರು ನಿಲ್ಲಿಸಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ನಮ್ಮ ರೈತರಿಗೆ ಅನ್ಯಾಯ ಮಾಡಿ ತಮಿಳುನಾಡಿನ ರೈತರಿಗೆ ಅನುಕೂಲ ಮಾಡಿಕೊಡುತ್ತಿದೆ. ಇದರ ಹಿಂದೆ ರಾಜಕೀಯ ಕಾರಣಗಳಿವೆ.ಈಗಾಗಲೇ ಈ ಭಾಗದ ರೈತರು ಬೆಳೆ ಹಾಕಿದ್ದು,ಆ ಬೆಳೆಗಳಿಗೆ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರು ಬೆಳೆ ನಷ್ಟ ಅನುಭವಿಸ ಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತಸಂಘದ ಧರಣಿ ಹಿನ್ನಲೆಯಲ್ಲಿ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ದರ್ಶನ್ ಪುಟ್ಟಣ್ಣಯ್ಯ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ನಾಯಕರಾದ ಕೆಂಪೂಗೌಡ,ಹರೀಶ್,ಪ್ರಸನ್ನ ಗೌಡ ಸೇರಿದಂತೆ ಹಲವರಿದ್ದರು.




