Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟ| ಸರ್ಕಾರದ ವಿರುದ್ದ ಬಾಯಿ ಬಡಿದುಕೊಂಡು ಪ್ರತಿಭಟನೆ

ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶ ವಿರೋಧಿಸಿ ಮಂಡ್ಯ ನಗರದಲ್ಲಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ, ಇಂದು ಹೋರಾಟಗಾರರು ಬಾಯಿ ಬಡಿದು ಕೊಂಡು ಪ್ರತಿಭಟಿಸುವ ಮೂಲಕ ಸರ್ಕಾರದ ಗಮನ ಸೆಳೆದರು.

ರೈತರು, ಕನ್ನಡ ಹೋರಾಟಗಾರರು ಸೇರಿ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಂಕಷ್ಟ ಕಾಲದಲ್ಲಿ ಮಧ್ಯ ಪ್ರವೇಶ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಂಸದೆ ಸುಮಲತಾ ಅಂಬರೀಶ್ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಘೋ‍ಷಣೆಗಳನ್ನು ಕೂಗಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ಕಾವೇರಿ ಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಹೋರಾಟದಲ್ಲಿ ಮಾಜಿ ಶಾಸಕ ಕೆ ಟಿ ಶ್ರೀಕಂಠೇಗೌಡ, ರೈತ ಹೋರಾಟಗಾರ್ತಿ ಸುನಂದಾ ಜಯರಾಂ, ಮುಖಂಡರಾದ ಬೇಕ್ರಿ ರಮೇಶ್, ಕೆ ಬೋರಯ್ಯ, ಕೀಲಾರ ಕೃಷ್ಣ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಕರವೇ ಶಂಕರೇಗೌಡ, ಇಂಡುವಾಳು ಬಸವರಾಜ್, ಎಂ ಎಲ್ ತುಳುಶೀಧರ್ ನೇತೃತ್ವ ವಹಿಸಿದ್ದರು.

ರೈತರಿಂದ ರಸ್ತೆತಡೆ

nudikarnataka.com

ಕಾವೇರಿ ವಿಚಾರದಲ್ಲಿ ಸರ್ಕಾರ ಧೋರಣೆ ಖಂಡಿಸಿ ಮಂಡ್ಯನಗರದ ಸಂಜಯ ವೃತ್ತದಲ್ಲಿ ರೈತರು ಇಂದು ರಸ್ತೆತಡೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಉಂಟಾಯಿತು, ಸರ್ಕಾರಿ ಬಸ್ ಗಳು ಮುಂದೆ ಸಂಚರಿಸಲು ಮುಂದಾದಾಗ ಪ್ರತಿಭಟನಾಕಾರರು ಬಸ್ ಮುಂದೆ ಕುಳಿತು ಅಡ್ಡಿಪಡಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರೈತರು ಘೋಷಣೆಗಳನ್ನು ಕೂಗಿದರು.

ರೈತಸಂಘದ ಮುಖಂಡರಾದ ವಿಜಯ್ ಕುಮಾರ್, ಬಿದರಕೋಟೆ ರಮೇಶ್, ಮರಿಚೆನ್ನಪ್ಪ, ಸಿದ್ದೇಗೌಡ, ಅಣ್ಣೂರು ಮಹೇಂದ್ರ, ರಾಮಕೃಷ್ಣೇಗೌಡ, ಜವರೇಗೌಡ ರಸ್ತೆತಡೆಯಲ್ಲಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ