ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ದ ಮದ್ದೂರು ತಾಲ್ಲೂಕಿನ ಭಾರತೀನಗರದಲ್ಲಿ ರೈತರು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.
ರೈತ ಸಂಘಟನೆಯ ಕಾರ್ಯಕರ್ತರು ಭಾರತೀನಗರದ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಜಮಾಯಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆನಡೆಸಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರಗಾಲ ಕಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ನಡೆಯುತ್ತಿರುವ ಲೋಕಾಸಭಾ ಚುನಾವಣೆಗೆ ಅನುಕೂಲವಾಗಲಿ ಎನ್ನುವ ದೃಷ್ಠಿಯಿಂದ ತಮಿಳುನಾಡಿಗೆ ನೀರು ಬಿಡುಗಡೆಮಾಡಿದೆ. ಈ ಕೂಡಲೇ ಕೆಆರ್’ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಹರಿಯುತ್ತಿರುವ ನೀರನ್ನು ನಿಲ್ಲಿಸಬೇಕು. ಜಿಲ್ಲೆಯಲ್ಲಿ ಒಣಗುತ್ತಿರುವ ಬೆಳೆಗಳನ್ನು ರಕ್ಷಣೆ ಮಾಡಲು ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.
ಮದ್ದೂರು ಮಳವಳ್ಳಿ ಹೆದ್ದಾರಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿದ್ದರಿಂಧ ವಾಹನಗಳ ದಟ್ಟಣೆ ಹೆಚ್ಚಾಗಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಪ್ರತಿಭಟನೆಯಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ರಾಮಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ, ರೈತಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಬಾಬು, ಮಂಡ್ಯ ಜಿಲ್ಲಾ ಖಜಾಂಚಿ ರವಿಕುಮಾರ್, ಪುಟ್ಟಸ್ವಾಮಯ್ಯ, ಜಿಲ್ಲಾ ಉಪಾಧ್ಯಕ್ಷ ಜಿ.ಎ.ಶಂಕರ್, ಮಹಿಳಾ ಸಂಘದ ಸಂಚಾಲಕಿ ನಾಗರತ್ನಮ್ಮ, ದಯಾನಂದ, ಪಟೇಲ್ ಬೋರೇಗೌಡ ಸೇರಿದಂತೆ ಹಲವರಿದ್ದರು.




