ಕರ್ನಾಟಕ ರಾಜ್ಯ ಸರ್ಕಾರವು 10ನೇ ಮತ್ತು ದ್ವಿತೀಯ ಪಿಯು ತರಗತಿಯ ವಿದ್ಯಾರ್ಥಿಗಳಿಗೆ ನಂ.1, 2 ,3 ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಸ್ವಾಗತಿಸಿದೆ.
10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಮತ್ತು ಅದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಎಂಬ ಮಾದರಿಯನ್ನು ಕೈ ಬಿಟ್ಟು ನಂ. 1, 2, 3 ಮಾದರಿಯಲ್ಲಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರವು ಕೈಗೊಂಡಿದೆ. ಸರ್ಕಾರದ ಈ ನಿರ್ಧಾರವನ್ನು ಎಐಡಿಎಸ್ಓ ಸ್ವಾಗತಿಸುತ್ತದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ಉಂಟಾಗುವ ಒತ್ತಡವನ್ನು ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಉಂಟಾಗುವ ಮಾನಸಿಕ ತಳಮಳವನ್ನು ನಿವಾರಿಸಲು ಇದು ಸಹಕಾರಿ ಆಗಬಹುದೆಂದು ನಾವು ಭಾವಿಸುತ್ತೇವೆ ಎಐಡಿಎಸ್ಓ ಮಂಡ್ಯ ಜಿಲ್ಲಾ ಸಂಚಾಲಕಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕರನ್ನು ಒಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆ ಮುಖಾಂತರ ಈ ನಿರ್ಧಾರವನ್ನು ಅನುಷ್ಠಾನಕ್ಕೆ ತರಬೇಕು ಎಂದು ಅವರು ಮನವಿ ಮಾಡಿದ್ದಾರೆ.




