ಕಾಂಗ್ರೆಸ್ ಕಾರ್ಯಕರ್ತರು ಅಸಡ್ಡೆ ತೋರದೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ,
ಪಕ್ಷ ಸಂಘಟನೆಯಲ್ಲಿ ತೊಡಗಿದವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಅವರ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘಟನಾ ಕೌಶಲ್ಯ ಹೊಂದಿರುವ ಎಂ.ಎಸ್.ಚಿದಂಬರ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಪಕ್ಷ ನೇಮಕ ಮಾಡಿದೆ. ಅವರು ಪಕ್ಷ ಕಟ್ಟುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಲೋಕಸಭಾ ಚುನಾವಣೆಗಳಲ್ಲಿ ಅಧ್ಯಕ್ಷರಿಗೆ ಹೆಗಲುಕೊಟ್ಟು ಜೋಡೆತ್ತುಗಳ ರೀತಿ ತಾವು ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್ ಪದಗ್ರಹಣ ಸ್ವೀಕರಿಸಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಸಂಯೋಜಕರಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದು, ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿ ಪಕ್ಷ ಕಟ್ಟುವ ಕೆಲಸ ಮಾಡೋಣ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ದೃಷ್ಟಿಯಲ್ಲಿ ಎಲ್ಲರೂ ಸೇರಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಸಚಿವ ಎಂ ಎಸ್ ಆತ್ಮಾನಂದ, ಕೆ.ಬಿ.ಚಂದ್ರಶೇಖರ್, ಹಾಲಹಳ್ಳಿ ರಾಮಲಿಂಗಯ್ಯ, ಚಂದುಪುರ ಪಾಪಣ್ಣ, ಸಿಎಂ ದ್ಯಾವಪ್ಪ, ವಿಜಯಲಕ್ಷ್ಮಿ ರಘುನಂದನ್, ಹನ್ಸಿಯಭಾನು, ಕೆಎಚ್ ನಾಗರಾಜು, ಸಚಿನ್ ಚಲುವರಾಯಸ್ವಾಮಿ, ರಾಮಕೃಷ್ಣ, ಎಂ ಪುಟ್ಟೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




