ನಂಜನಗೂಡು ನಗರಸಭಾ ಸದಸ್ಯರಾಗಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ರಾಜ್ಯ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವವಿರುವ ಮುಖಂಡ ಡಿ ಆರ್ ರಾಜು ಅವರನ್ನು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಪೌರ ಕಾರ್ಮಿಕರ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಎಂ.ಮಾದೇವ ಒತ್ತಾಯಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ಆದಿದ್ರಾವಿಡ ಮಾದಿಗ ಸಮಾಜಕ್ಕೆ ಯಾವುದೇ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಿರುವುದಿಲ್ಲ. ಈ ಸಮಾಜವು ಕರ್ನಾಟಕ ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ನಾಯಕರಾದ ಡಿ ಆರ್ ರಾಜು ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸುಮಾರು 30 ವರ್ಷಗಳಿಂದ ಪಕ್ಷ ಸಂಘಟನೆಯನ್ನು ತೊಡಗಿದ್ದು, ಅವರನ್ನು ಪರಿಗಣಿಸಬೇಕೆಂದು ಆಗ್ರಹಿಸಿದರು.
ಹಿಂದುಳಿದ ವರ್ಗದವರ ಜನಪ್ರಿಯ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಡಿ ಆರ್ ರಾಜು ಅವರನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಎಂ.ಗಣೀಶ್, ಖಜಾಂಚಿ ಶಿವಕುಮಾರ್, ಪದಾಧಿಕಾರಿಗಳಾದ ನಾಗರಾಜುಮ ಮಹೇಂದ್ರ, ಓಬಯ್ಯ ಮತ್ತಿತರರಿದ್ದರು.




