Thursday, September 19, 2024

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಆಚರಣೆ: ಡಾ.ಕುಮಾರ

ಮಂಡ್ಯ ಜಿಲ್ಲಾಡಳಿತ ವತಿಯಿಂದ ನ.1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ಬಾರಿ ಮಂಡ್ಯ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಆಚರಣೆ ಮಾಡಲಾಗುವುದು, ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆ ನಂತರ ಧ್ವಜಸಂದೇಶ ನೀಡಲಿದ್ದಾರೆ ಎಂದರು.

ಕರ್ನಾಟಕ ರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ಆಹ್ವಾನಿಸಿ ಹಾಗೂ ಸಾರ್ವಜನಿಕರಿಗೆ ಸೂಕ್ತ ಆಸನಗಳ ವ್ಯವಸ್ಥೆ ಜೊತೆಗೆ ಧ್ವಜಾರೋಹಣ ಅಂಗಳವನ್ನು ತಳಿರು ತೋರಣ ಹಾಗೂ ಹೂ ಕುಂಡಗಳಿಂದ ಆಲಂಕರಿಸುವಂತೆ ಸೂಚಿಸಿದರು.

ಕುವೆಂಪು ರಚನೆಯ ಎಲ್ಲಾದರೂ ಇರು ಎಂತಾದರೂ ಇರು, ದ.ರಾ ಬೇಂದ್ರೆಯ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕರ ಹೊತ್ತಿತೊ ಹೊತ್ತಿತು ಕನ್ನಡದ ದೀಪ, ಚಿನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ಚೆಲುವ ಕನ್ನಡ ನಾಡು ಹಾಡುಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಲಿವೆ ಎಂದರು.

ಕನ್ನಡ ಸಾಹಿತ್ಯ, ಕರ್ನಾಟಕ ಇತಿಹಾಸದ ಘತವೈಭವ ಸಾರುವ ಹಾಗೂ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹನೀಯರ ಟ್ಯಾಬ್ಲೋ ಹಾಗೂ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದರು.

ರಾಷ್ಟ್ರೀಯ ಹಾಗೂ ಕನ್ನಡ ನಾಡಿನ ಭಾವೈಕ್ಯತೆ ಮೂಡಿಸುವ ನೃತ್ಯರೂಪಕ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ನಡೆಸಿ ಹಾಗೂ ಆಗಮಿಸಿದ ಎಲ್ಲರಿಗೂ ಸಿಹಿ ವಿತರಿಸುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಎಸಿ ಶಿವಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ವಿವಿಧ ಸಂಘಟನೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!