Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಆದ್ಯತೆ – ವಿಜಯೇಂದ್ರ

ಮಂಡ್ಯ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಪಕ್ಷದಿಂದ ಹೊರಗುಳಿದಿರುವ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಮಂಡ್ಯನಗರದ ಜಿಲ್ಲಾ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣಗೌಡ ಅವರನ್ನು ಗೆಲ್ಲಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲೇ ಮೊದಲ ಬಾರಿಗೆ ಕಮಲ ಅರಳಿಸಲಾಗಿತ್ತು. ಅದು ನನಗೆ ರಾಜಕೀಯವಾಗಿ ಗಮನ ಸೆಳೆಯುವಂತೆ ಮಾಡಿದ್ದರ ಹಿನ್ನೆಲೆಯಲ್ಲಿ ಈ ಜಿಲ್ಲೆಯಿಂದಲೇ ನಾನು ಪಕ್ಷ ಸಂಘಟನೆ ಮಾಡುವುದಾಗಿ ಸ್ಪಷ್ಟಪಡಿಸಿದರು.

ಕಳೆದ ಬಾರಿ ನಮ್ಮ ಸರ್ಕಾರವಿದ್ದಾಗ ಹಳೇ ಮೈಸೂರು ಭಾಗದಲ್ಲಿ ಜನರ ಬಳಿಗೆ ಹೋಗದೆ ಪಕ್ಷ ಸಂಘಟಿಸುವಲ್ಲಿ ನಾವು ವಿಫಲರಾಗಿದ್ದೇವೆ. ಇದೂ ಸಹ ವಿಧಾನ ಸಭಾ ಚುನಾವಣೆಯಲ್ಲಿ ಸೋಲಾಗಲು ಕಾರಣವಾಯಿತು ಎಂದು ಹೇಳಿದರು.

28 ಸ್ಥಾನ ಗೆಲ್ಲುವುದು ಗುರಿ

ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಪ್ಲೆಸ್ ಒಂದು ಸ್ಥಾನಗಳನ್ನು ಗೆದ್ದಿದ್ದೆವು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ೨೮ಕ್ಕೆ ೨೮ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಮತ್ತು ಕಾರ‍್ಯಕರ್ತರ ಚುನಾವಣೆಯಾಗಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಸಹ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ಸದೃಢಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಜನವಿರೋಧಿ ಸರ್ಕಾರ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಚಿವರುಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂಪುಟದ ಸಚಿವರುಗಳು ಹುಡುಗಾಟ ಆಡುತ್ತಿದ್ದಾರೆ. ಕನಿಷ್ಠ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೩೫೦ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಹೇಳುತ್ತಾರೆ. ಆದರೆ ಅದಕ್ಕೆ ಕ್ರಿಯಾ ಯೋಜನೆ ರೂಪಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದರು. ಚುನಾವಣೆಯಲ್ಲಿ ಜಾರಿಗೆ ತಂದ ಐದೂ ಗ್ಯಾರಂಟಿಗಳನ್ನು ಸರಿಯಾಗಿ ಜನತೆಗೆ ತಲುಪಿಸುತ್ತಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುತ್ತಿದ್ದ 2 ಸಾವಿರ ರೂ.ಗಳನ್ನೂ ಸಹ ಕಳೆದ ತಿಂಗಳಿನಿಂದ ನಿಲ್ಲಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರಚಿದ್ದಾರೆ. ಯಾವ ಗ್ಯಾರಂಟಿಗಳೂ ಸರಿಯಾಗಿ ಜಾರಿಯಾಗಿಲ್ಲ ಎಂದು ಹೇಳಿದರು.

ರೈತರ ಬಗ್ಗೆ ತಾತ್ಸಾರ 

ರೈತರಿಗಾಗಿ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 6 ಸಾವಿರ ರೂ.ಗಳನ್ನು ನೀಡುತ್ತಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ 4 ಸಾವಿರ ರೂ. ಸೇರಿಸಿ ಒಟ್ಟು 10 ಸಾವಿರ ರೂ.ಗಳನ್ನು ನೀಡುತ್ತಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ 4 ಸಾವಿರ ರೂ.ಗಳನ್ನು ನಿಲ್ಲಿಸಿದೆ. ಜತೆಗೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾಸಿರಿ ಯೋಜನೆಯನ್ನೂ ಸ್ಥಗಿತಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನನುಕೂಲ ಮಾಡಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ರೈತರು ಕಬ್ಬಿನ ದರ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸಲು ಬಂದರೆ, ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಚಲಾಯಿಸಿ ರೈತರನ್ನು ಬಂಧಿಸಿದ್ದಾರೆ. ಇಂತಹ ಬೆಳವಣಿಗೆ ಸರಿಯಲ್ಲ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮಾಜಿ ಸಂಸದ ರವಿಶಂಕರ್, ಮಾಜಿ ಶಾಸಕ ಮಹೇಶ್, ಬಿಜೆಪಿ ಕರ‍್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ, ಮುಖಂಡರಾದ ಸಚ್ಚಿದಾನಂದ, ಡಾ. ಇಂದ್ರೇಶ್, ಮುನಿರಾಜು, ವಿದ್ಯಾ ನಾಗೇಂದ್ರ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ