Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಡಿ.3ಕ್ಕೆ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ.3ರಂದು ಭಾನುವಾರ ಪತ್ರಿಕಾ ದಿನಾಚರಣೆ ಸಮಾರಂಭ, ನೂತನ ಅಧ್ಯಕ್ಷರ ಪದಗ್ರಹಣ, ಜೀವಮಾನ ಸಾಧನೆ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ನವೀಕೃತ ಕೊಠಡಿ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಪಿ. ಪ್ರಕಾಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ಪತ್ರಕರ್ತರ ಸಂಘದ ಬಳಿ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಹಿಸಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಧಾನ ಭಾಷಣ ಮಾಡಲಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ರವಿಕುಮಾರ್ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಕೆಆರ್ ಪೇಟೆ ಶಾಸಕ ಎಚ್.ಟಿ. ಮಂಜು ನವೀಕೃತ ಕೊಠಡಿ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಪಿ ಪ್ರಕಾಶ್ ಅಧ್ಯಕ್ಷತೆ ವಹಿಸುವರು ಎಂದರು.

ನಿರ್ಗಮಿತ ಅಧ್ಯಕ್ಷ ಕೆ. ಸಿ.ಮಂಜುನಾಥ ಅಧಿಕಾರ ಹಸ್ತಾಂತರ ಮಾಡಲಿದ್ದು, ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನ್‌ಗೌಡ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಿ.ಪಿ.ಉಮೇಶ್ ಮುಖಂಡ ಇಂಡುವಾಳು ಸಚ್ಚಿದಾನಂದ ಭಾಗವಹಿಸುವವರು. ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ನಿರ್ದೇಶಕ ಸಿ.ಎನ್. ಮಂಜುನಾಥ್, ರಾಷ್ಟ್ರೀಯ ಸಮಿತಿ ಸದಸ್ಯ ಜೆ.ಎಂ.ಬಾಲಕೃಷ್ಣ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಇದೇ ಸಂದರ್ಭದಲ್ಲಿ ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಹಿರಿಯ ಪತ್ರಕರ್ಥ ಡಿ.ಎಲ್.ಲಿಂಗರಾಜು ಅವರಿಗೆ ಪ್ರದಾನ ಮಾಡಲಾಗುವುದು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಯೋಗೇಶ್ ಮಾರೇನಹಳ್ಳಿ, ಆರ್.ಎನ್.ನಂಜುಂಡಸ್ವಾಮಿ, ಪುಟ್ಟರಾಜು, ವಕ್ಕರಹಳ್ಳಿ ಜಯರಾಜು ಹಾಗೂ ಮಹೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.

ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಮಾತನಾಡಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆ.ಎನ್.ನವೀನ್ ಕುಮಾರ್, ನಿರ್ದೇಶಕರಾದ ಗಣಂಗೂರು ನಂಜೇಗೌಡ, ಮಂಜುಳಾ ಕಿರುಗಾವಲು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ