ಮುಂಬರುವ ಫೆಬ್ರವರಿಯಲ್ಲಿ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಸ್ವಾಗತ ಕೋರಲಾಯಿತು. ಪ್ರಚಾರ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಶುಭ ಕೋರಿದರು.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಪುಷ್ಪಾರ್ಚನೆ ಮಾಡಿ ಸ್ವಾಗತ ಕೋರಿ ಮಾತನಾಡಿ, ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವಿಶೇಷ ಪರಂಪರೆ ಇದ್ದು, ಲಕ್ಷಾಂತರ ಭಕ್ತರು ಭಾಗಿಯಾಗುತ್ತಾರೆ. ಆದಿಚುಂಚನಗಿರಿ ಮಠ ಹಾಗೂ ಸುತ್ತೂರು ಮಠ ಜನಪರ ಕೆಲಸದಲ್ಲಿ ಮುಂಚೂಣಿಯಲ್ಲಿದ್ದು, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಕೊಡುಗೆ ನೀಡಿವೆ ಎಂದು ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸೀಫ್ ಮಾತನಾಡಿ, ಸುತ್ತೂರು ಮಠಕ್ಕೆ ತನ್ನದೇ ಆದ ಮಹತ್ವವಿದೆ, ಶ್ರೀಗಳ ಮಾರ್ಗದರ್ಶನದಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಸ್ಮರಿಸಿದರು.
ಸುತ್ತೂರು ಕ್ಷೇತ್ರದಲ್ಲಿ ಫೆ. 6 ರಿಂದ 11ರವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಠದ ವತಿಯಿಂದ ಮನವಿ ಮಾಡಲಾಯಿತು. ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ ವಿಜಯೋತ್ಸವ ಆಚರಿಸಲಾಯಿತು.
ದನಗೂರು ಮಠದ ಮುಮ್ಮಡಿ ಷಡಕ್ಷರಿ ದೇಶಿ ಕೇಂದ್ರ ಸ್ವಾಮೀಜಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್, ಅಶೋಕ್ ಜಯರಾಮ್, ಲಿಂಗಾಯಿತ ಮಹಾಸಭಾ ಅಧ್ಯಕ್ಷ ಎಂ ಎಸ್ ಮಂಜುನಾಥ್, ಎಂ ಗುರುಪ್ರಸಾದ್, ಎಂ ಶಿವಕುಮಾರ್, ವೀರಶೈವ ಯುವ ಮಹಾಸಭಾದ ಜೀವನ್, ಸಂದೇಶ್, ಮಹಾಂತಪ್ಪ ಮತ್ತಿತರರಿದ್ದರು.




