ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕಾರಣವಾಗಿರುವ ಕೃಷ್ಣರಾಜಪೇಟೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಕೆ.ಆರ್.ಪೇಟೆ ಸರ್ಕಾರಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
1958ರಲ್ಲಿ ಅಂದಿನ ಶಾಸಕರಾಗಿದ್ದ ದಿ.ಎಂಕೆ ಬೊಮ್ಮೇಗೌಡ ಅವರ ದೂರ ದೃಷ್ಟಿಯ ಫಲವಾಗಿ ಆರಂಭವಾದ ಸರ್ಕಾರಿ ಪಾಲಿಟೆಕ್ನಿಕ್ ಲಕ್ಷಾಂತರ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಹಾಯವಾಗಿದೆ. ಇದುವರೆಗೆ 65ಕ್ಕೂ ಹೆಚ್ಚು ತಂಡಗಳು ಕಾಲೇಜಿನಲ್ಲಿ ತಾಂತ್ರಿಕ ಶಿಕ್ಷಣ ಪಡೆದು ನಾಡಿನ ಶ್ರೇಷ್ಠ ಇಂಜಿನಿಯರುಗಳಾಗಿ, ಸಮಾಜ ಸೇವಕರಾಗಿ, ಉದ್ಯಮಿಗಳಾಗಿ ಕಾರ್ಯನಿರ್ವಹಿಸುವ ಮೂಲಕ ತಮ್ಮ ಚಾಪನ್ನು ಮೂಡಿಸಿದ್ದಾರೆ ಎಂದರು.
ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದ ನಾನು ಅಂದಿನ ಸಿಹಿ ನೆನಪುಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸ್ಮರಣೆ ಮಾಡಿಕೊಳ್ಳುತ್ತಿದ್ದೇನೆ. ಅಂದು ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ನಾನು ಸರ್ಕಾರಿ ಕೆಲಸಕ್ಕೆ ಸೇರಲು ಅನಾನುಕೂಲವಾಯಿತಾದರೂ, ಗುತ್ತಿಗೆದಾರನಾಗಿ ನನ್ನ ವೃತ್ತಿ ಜೀವನವನ್ನು ಆರಂಭಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷನಾಗಿ, ಶಾಸಕನಾಗಿ, ಲೋಕಸಭಾ ಸದಸ್ಯನಾಗಿ, ಮೂರು ಬಾರಿ ರಾಜ್ಯ ಸರ್ಕಾರದ ಸಚಿವನಾಗಿ ಕೆಲಸ ಮಾಡುತ್ತಿರುವ ನಾನು ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿ ಸಮಾರಂಭದಲ್ಲಿ ಭಾಗವಹಿಸಿದ್ದೇನೆ. ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದರು.
ಶಾಸಕ ಹೆಚ್ ಟಿ ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಸ್.ಬಿ.ಸೋಮೇಶ್ ಪ್ರಾಸ್ತಾವಿಕ ನುಡಿಗಳ ನಾಡಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಆಗಬೇಕಾಗಿರುವ ಕೆಲಸ ಕಾರ್ಯಗಳ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ.ಪ್ರಕಾಶ್, ಕಾಂಗ್ರೆಸ್ ನಾಯಕ ಬಿ.ಎಲ್. ದೇವರಾಜು, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನಾಗರಾಜು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್. ದಿನೇಶ್, ರಾಜ್ಯ ಆರ್ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಖಜಾಂಚಿಯಾದ ಮಲ್ಲಿಕಾರ್ಜುನ, ಲಯನ್ ಕೆ. ದೇವೇಗೌಡ, ಸಂಘದ ಕಾರ್ಯದರ್ಶಿ ಶಿವಕುಮಾರ್, ಸಚಿವರ ಧರ್ಮಪತ್ನಿ ಧನಲಕ್ಷ್ಮಿ ಚೆಲುವರಾಯಸ್ವಾಮಿ ಸೇರಿದಂತೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಚಿವ ಚಲುವರಾಯಸ್ವಾಮಿ ದಂಪತಿಗಳು ಹಾಗೂ ಮಾಜಿ ಶಾಸಕರು, ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ಇಸ್ರೋ ಚಂದ್ರಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಗಾಯಕರು ಹಾಗೂ ಸಂಗೀತ ತಂತ್ರಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಗೀತ ಸುಧೆಯ ರಸದೌತಣವನ್ನು ಉಣಬಡಿಸಿದರು.




