ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ್ದ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಲ್ಲಿ ಸಾವಿರಾರು ಕೋಟಿ ಹಣವನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದಾಗಿ ಸರ್ಕಾರವೇ ತಿಳಿಸಿದೆ. ಸಚಿವರು ಗ್ಯಾರಂಟಿ ಯೋಜನೆಯಲ್ಲೆ ಪರಿಶಿಷ್ಟರಿಗೆ ಮೀಸಲಿರಿಸಿದ್ದ ಹಣವನ್ನು ಪರಿಶಿಷ್ಟರಿಗೆ ನೀಡುವ ಮಾತು ಆಡಿದ್ದಾರೆ, ಮತ್ತೊಂದೆಡೆ ಗ್ಯಾರಂಟಿ ಫಲಾನುಭವಿಗಳಲ್ಲಿ ಪರಿಶಿಷ್ಟರನ್ನು ಗುರುತಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.
ಪರಿಶಿಷ್ಟ ಸಮುದಾಯಕ್ಕೆ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡು ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ, ಈ ಕೂಡಲೇ ಗ್ಯಾರೆಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಹಣವನ್ನು ವಾಪಸ್ ಪಡೆದು ಪರಿಶಿಷ್ಟ ಕಲ್ಯಾಣ ಕಾರ್ಯಕ್ರಮಗಳಾದ ಗಂಗಾ ಕಲ್ಯಾಣ ಮತ್ತು ವಸತಿ ಶಾಲೆಗಳ ಭೂಮಿ ಖರೀದಿ ಮಾಡಲು ಬಳಸಬೇಕು ಎಂದು ಒತ್ತಾಯಿಸಿದರು.
ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಪರಿಶಿಷ್ಟ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಕುಮಾರ್, ಮುಖಂಡರಾದ ಅಶೋಕ್ ಜಯರಾಮ್. ಟಿ.ಶ್ರೀಧರ್, ಎಸ್ ಮಲ್ಲೇಶ್, ಶಿವಲಿಂಗಯ್ಯ, ಸಿದ್ದರಾಜು ಗೌಡ, ಸಿ ಟಿ ಮಂಜುನಾಥ್ ಮತ್ತಿತರರಿದ್ದರು.




