ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ಆವರಣದಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ವಿದ್ಯಾರ್ಥಿಯೋರ್ವ ಆ್ಯಸಿಡ್ ದಾಳಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಂತ್ರಸ್ತ ವಿದ್ಯಾರ್ಥಿನಿಯರನ್ನು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ. ಇವರು ಪಿಯುಸಿ ಪರೀಕ್ಷೆ ಹಿನ್ನೆಲೆ ಕಾಲೇಜು ಆವರಣದಲ್ಲಿ ಓದುತ್ತಿದ್ದಾಗ ಘಟನೆ ನಡೆದಿದೆ. ಓರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿ ನಡೆಸಲು ಮುಂದಾಗಿದ್ದು, ಆಕೆಯ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎನ್ನಲಾಗಿದೆ.
ಆರೋಪಿಯು ಮಾಸ್ಕ್, ಹ್ಯಾಟ್ ಧರಿಸಿದ್ದು, ಕೇರಳ ಮೂಲದ ಅಭೀನ್ ಎಂದು ಗುರುತಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ ಎನ್ನಲಾಗುತ್ತಿದೆ. ಕೃತ್ಯಕ್ಕೆ ಕಾರಣ ಏನು ಎಂಬುವುದು ಸಧ್ಯಕ್ಕೆ ತಿಳಿದು ಬಂದಿಲ್ಲ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಗಾಯಾಳು ವಿದ್ಯಾರ್ಥಿನಿಯರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.




