ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿದ್ದು, ಪ್ರತಿ ಕುಟುಂಬಕ್ಕೆ 5 ರಿಂದ 6 ಸಾವಿರ ರೂ ಹಣ ತಲುಪುತ್ತಿದೆ. ಕರ್ನಾಟಕದ ಜನರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ಸದೃಢರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇವರು ವರ ಅಥವಾ ಶಾಪವನ್ನು ಕೊಡುವುದಿಲ್ಲ. ಅವಕಾಶ ಮಾತ್ರ ಕೊಡುತ್ತದೆ, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನರ ಸೇವೆ ಮಾಡಿ ಉತ್ತಮ ಸಮಾಜವನ್ನು ಜನಪ್ರತಿನಿಧಿಗಳು ನಿರ್ಮಾಣ ಮಾಡಬೇಕು. ಆಗ ಮಾತ್ರ ಜನಪ್ರತಿನಿಧಿಗಳು ಜನರ ಮನಸ್ಸಿನಲ್ಲಿ ಉಳಿಯುತ್ತಾರೆ ಎಂದರು.

₹2000 ಕೋಟಿ ಹಣ ಮಂಜೂರು
ಕೆರೆ ತುಂಬಿಸಲು, ನಾಲೆ ಅಭಿವೃದ್ಧಿಗೆ ಸರ್ಕಾರದಿಂದ ಈಗಾಗಲೇ ರೂ 2000 ಕೋಟಿಗೂ ಹೆಚ್ಚು ಹಣವನ್ನು ಮಂಜೂರು ಮಾಡಲಾಗಿದೆ. ರೈತರ ಬದುಕಿಗೋಸ್ಕರ, ನೀರಿಗಾಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನ ಮಾಡಿದರೆ ಕಷ್ಟಕಾಲದಲ್ಲಿ ಸಹಕಾರಿ ಆಗುತ್ತದೆ ಆದಷ್ಟು ಬೇಗ ಅನುಷ್ಟಾನ ಮಾಡುತ್ತೇವೆ ಎಂದರು.
ಅರಿವು ಮೂಡಿಸಲು ಸಮಾವೇಶ: ಚಲುವರಾಯಸ್ವಾಮಿ
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ವಹಿಸಿ ಮಾತನಾಡಿ ರಾಜ್ಯದ ಜನರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಸರ್ಕಾರದ ಐದು ಗ್ಯಾರಂಟಿ ಯೋಜನೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸರ್ಕಾರದ ಯೋಜನೆಗಳನ್ನು ಪಡೆಯದ ಜನರಿಗೆ ಸೌಲಭ್ಯವನ್ನು ತಲುಪಿಸುವ ಕೆಲಸವನ್ನು ಸಹ ಮಾಡುತ್ತಿದೆ ಎಂದರು.

ಸರ್ಕಾರದ 5 ಗ್ಯಾರಂಟಿಗಳಿಂದ ಪ್ರತಿ ಮನೆಗೆ ನಾಲ್ಕರಿಂದ ಐದು ಸಾವಿರ ರೂ ಹಣ ತಲುಪುತ್ತಿದೆ. ಮಂಡ್ಯ ಜಿಲ್ಲೆಗೆ ಕಾವೇರಿ ನಾಲಾ ಆಧುನೀಕರಣ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ 800 ಕೋಟಿ ರೂ ರಷ್ಟು ಮಂಜೂರಾಗಿದೆ. ಗ್ಯಾರಂಟಿಯ ಜೊತೆಗೆ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದರು.
ಬರ ಪರಿಹಾರದ ಹಣ ನೀಡದ ಕೇಂದ್ರ ಸರ್ಕಾರ
ಕಳೆದ ಆರು ತಿಂಗಳುಗಳಿಂದ ರಾಜ್ಯ ಸರ್ಕಾರ ಬರಗಾಲದ ಪರಿಹಾರವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಹಣ ಬಿಡುಗಡೆಯಾಗಿಲ್ಲ. ನರೇಗಾ ಯೋಜನೆಯ ಅಡಿಯಲ್ಲಿ ಕೂಲಿ ಮಾಡಿದ ಜನರಿಗೆ 4 ತಿಂಗಳಿಂದ ಹಣ ಪಾವತಿಯಾಗಿಲ್ಲ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಾಯ ಮಾಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು, ಸಮಸ್ಯೆಯನ್ನು ಹೋಗಲಾಡಿಸಲು ಶ್ರಮಿಸುತ್ತಿದ್ದೇವೆ. ಜಿಲ್ಲೆಗೆ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿರುವುದು ಹಾಗೂ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ನಿರ್ಮಾಣ ಮಾಡಲು ನಿರ್ಧರಿಸಿರುವುದು ಜಿಲ್ಲೆಗೆ ಅತ್ಯಂತ ದೊಡ್ಡ ಕೊಡುಗೆಯಾಗಿದೆ ಎಂದರು.
ಪ್ರತಿಷ್ಠಿತ ಕೆ.ಆರ್.ಎಸ್ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತಿಕರಿಸುವ ಯೋಜನೆಯನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಆಯವ್ಯಯದಲ್ಲಿ ಘೋಷಣೆಯಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.
ನಾಲೆಗಳ ಆಧುನಿಕರಣಕ್ಕೆ ವಿಶೇಷ ಒತ್ತು
ಮಂಡ್ಯ ಜಿಲ್ಲೆಯಲ್ಲಿ ಹೇಮಾವತಿ, ನಿಡಘಟ್ಟ ಮತ್ತು ಕೆಮ್ಮಣ್ಣುನಾಲೆ ಹಾಗೂ ಹೆಬ್ಬಕವಾಡಿ, ಮಳವಳ್ಳಿ, ಪಾಂಡವಪುರ, ಬಸರಾಳು, ನಾಗಮಂಗಲ ಮುಂತಾದ ಭಾಗದ ನಾಲೆಗಳ ಆಧುನಿಕರಣಕ್ಕೆ ವಿಶೇಷವಾದ ಒತ್ತನ್ನು ಆಯವ್ಯಯದಲ್ಲಿ ನೀಡಲಾಗಿದೆ ಎಂದರು.
ಕೊಟ್ಟ ಭರವಸೆ ಈಡೇರಿಸಿದ ಸರ್ಕಾರ ರಾಜ್ಯದ ಜನತೆಗೆ ಭರವಸೆ ಕೊಟ್ಟಂತೆ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ವರದಿಯನ್ನು ಜನರ ಬಳಿಗೆ ತಂದಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು.
ಮಂಡ್ಯ ಜಿಲ್ಲೆ ಸೇರಿ ಇಡೀ ರಾಜ್ಯದಲ್ಲಿ ಬರ ಇದೆ. ಬರದ ನಡುವೆ ರೈತರು ಇಂದು ಜೀವನ ನಡೆಸಲು ಸಾಧ್ಯವಾಗಿರುವುದೇ ಗ್ಯಾರಂಟಿ ಯೋಜನೆಗಳ ಮೂಲಕ. ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ಸಹ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವೇ ಬರ ಪರಿಹಾರದ ಮೊದಲ ಕಂತನ್ನು ರೈತರಿಗೆ ನೀಡಿ ರೈತರ ಕಷ್ಟಕ್ಕೆ ಸಹಕರಿಸಿದೆ ಎಂದರು.
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಐ.ಟಿ ಪಾರ್ಕ್ ನಿರ್ಮಾಣ ಮಾಡುವುದು ಅತ್ಯವಶ್ಯಕವಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ಚಿಂತಿಸಿ ಜಿಲ್ಲೆಗೆ ಐ.ಟಿ. ಪಾರ್ಕ್ ನೀಡುವಂತೆ ಮನವಿ ಮಾಡಿದರು.
ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಜನರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಯುನಿವರ್ಸಲ್ ಬೇಸಿಕ್ ಇನ್ ಕಮ್ ಹೆಚ್ಚಾಗಿದೆ. ಜನರ ಹಣ ಉಳಿತಾಯವಾಗುತ್ತಿದೆ. ಉಳಿತಾಯದ ಹಣದಿಂದ ಜನರು ಮನಸ್ಸಿಗೆ ಸಂತೋಷಗೊಳಿಸುವ ಹಾಗೂ ಸೌಂದರ್ಯ ಹೆಚ್ಚಿಸುವ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಮನಸ್ಸು ಸಂತೋಷವಾಗಿದ್ದಾರೆ ಆರೋಗ್ಯ ವೃದ್ಧಿಸುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ತಮಿಳು ಕಾಲೋನಿಯ 167 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಎ. ಬಿ. ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಉದಯ್, ಮೈಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಗಂಗಾಧರ್, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ಅಧೀಕ್ಷಕರು ಎನ್. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




